ನವದೆಹಲಿ : ರಾಜ್ಯದಲ್ಲಿ ಜೂನ್ 25 ರಿಂದ ಆರಂಭವಾಗಲಿರುವ ಎಸ್ಎಸ್ಎಲ್ ಸಿ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಪರೀಕ್ಷೆ ನಡೆಸದಂತೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸಿದೆ.
ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸದಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಬೆಳಗಾವಿ ರಾಜಶ್ರೀ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ರಾಜ್ಯ ಸರಕಾರ ಜೂನ್ 25 ರಿಂದ ಜುಲೈ4ರ ವರೆಗೆ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ನಡೆಸಲು ಸಿದ್ದತೆಯನ್ನು ಮಾಡಿಕೊಂಡಿದೆ. ರಾಜ್ಯಸರಕಾರದ ಕ್ರಮದ ವಿರುದ್ದ ಪರವಿರೋಧದ ಚರ್ಚೆಗಳು ನಡೆದಿತ್ತು. ಈ ನಡುವಲ್ಲೇ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದ್ದರೂ ಕೂಡ ಹೈಕೋರ್ಟ್ ಸರಕಾರದ ಕ್ರಮವನ್ನು ಎತ್ತಿಹಿಡಿದಿತ್ತು.
ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಕುರಿತು ಸುಪ್ರೀಂ ಕೋರ್ಟ್ ನ ವರ್ಚುವಲ್ ಕೋರ್ಟ್ ಸಂ.5ರಲ್ಲಿ ವಿಚಾರಣೆ ನಡೆಯಲಿದ್ದು, ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಎಲ್.ನಾಗೇಶ್ವರ ರಾವ್, ನ್ಯಾ.ಕೃಷ್ಣ ಮುರಾರಿ, ನ್ಯಾ. ರವೀಂದ್ರ ಭಟ್ ಅವರಿದ್ದ ತ್ರಿಸದಸ್ಯ ಪೀಠ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದೆ. ಅಲ್ಲದೇ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದೆ.