ಮಕ್ಕಳು ಇಂದಿನ ದಿನಗಳಲ್ಲಿ ಕೇಳಿ ಕಲಿಯುವುದಕ್ಕಿಂತ ಹೆಚ್ಚಾಗಿ ನೋಡಿ ಕಲಿಯುವುದನ್ನು ರೂಡಿಸಿಕೊಂಡಿದ್ದಾರೆ. ಆ ನಿಟ್ಟಿನಲ್ಲಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಶಿಕ್ಷಣ ಸಂಸ್ಥೆಗಳಲ್ಲಿ ಪೂರಕ ವಾತಾವರಣದ ಅಗತ್ಯ ಇದೆ ಎಂದು ವಲಯ ತರಬೇತಿದಾರರು, ಕೆವಿಜಿ ಪಾಲಿಟೆಕ್ನಿಕ್ ನ ಎನ್ನೆಸ್ಸೆಸ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆಯವರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದಿಂದ ಹಮ್ಮಿಕೊಂಡ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಶಾಲಾ-ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘ-ಸಂಸ್ಥೆಗಳು, ಅಲ್ಲಿ ಹಮ್ಮಿಕೊಳ್ಳುವ ಕಾರ್ಯ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಪೂರಕ ವಾತಾವರಣವನ್ನು ಕಲ್ಪಿಸಿಕೊಡುತ್ತದೆ. ಇಲ್ಲಿ ಸಿಕ್ಕಂತಹ ವಿಚಾರಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಓರ್ವ ಸತ್ಪ್ರಜೆಯಾಗಿ ಸಮಾಜದಲ್ಲಿ ಕಾಣಿಸಿಕೊಳ್ಳಲು ಸಾಧ್ಯ ಎಂದರು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಆಂಗ್ಲಭಾಷಾ ವಿಭಾಗದ ಉಪನ್ಯಾಸಕಿ ಶ್ರೀಮತಿ ಭವ್ಯಾ ಪಿ ಎಂ ಮಾತನಾಡಿ, ವಿದ್ಯಾರ್ಥಿಗಳ ಜೀವನಕ್ಕೆ ಬೇಕಾದ ಪೂರಕ ಕಾರ್ಯಕ್ರಮಗಳನ್ನು ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಹಮ್ಮಿಕೊಳ್ಳುತ್ತಾ ಬಂದಿದೆ. ಇಂತಹ ಸಂಸ್ಥೆಗಳಲ್ಲಿ ಸೇರಿದ ತಾವುಗಳು ನೇರವಾಗಿ ಸಮಾಜಕ್ಕೆ ಸೇವೆ ಮಾಡುತ್ತೇವೆ ಎನ್ನುವುದಕ್ಕಿಂತಲೂ ತಮ್ಮ ಕರ್ತವ್ಯವನ್ನು ಚೆನ್ನಾಗಿ ನಿರ್ವಹಿಸಿದಾಗ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದರು. ಕಾರ್ಯಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿಯವರು ವಾಸ್ತವಿಕವಾಗಿ ಮಾತನಾಡಿ,
ಯಾಂತ್ರಿಕ ಶಿಕ್ಷಣದಿಂದ ಹೊರಬಂದು ಮೌಲ್ಯಯುತ ಬದುಕು ಕಟ್ಟಿಕೊಳ್ಳಲು ವಿದ್ಯಾರ್ಥಿ ದೆಸೆಯಲ್ಲಿ ವ್ಯಕ್ತಿತ್ವ ವಿಕಸನದಂತಹ ಕಾರ್ಯಕ್ರಮಗಳ ಅಗತ್ಯವಿದೆ ಎನ್ನುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ ಎಂದರು. ಕಾರ್ಯಕ್ರಮದ ಆರಂಭದಲ್ಲಿ ರಚನಾ ಪ್ರಾರ್ಥಿಸಿ ಅಕ್ಷತಾ ಅತಿಥಿಗಳನ್ನು ಸ್ವಾಗತಿಸಿದರು. ಪೂರ್ಣಿಮಾ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿ ಅನಘಾ ವಂದಿಸಿದರು. ಮೌನವಿ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಘಟಕ ನಾಯಕರಾದ ನಿತಿನ್ ಕೆ ಆರ್, ಹಾಗೂ ಕೃತಿಕಾ ಕೆ ಜೆ ಹಾಗೂ ಹಿರಿಯ ವಿದ್ಯಾರ್ಥಿ ಭುವನ್ ಪಿ ಮತ್ತಿತರರು ಉಪಸ್ಥಿತರಿದ್ದರು.
- Thursday
- November 21st, 2024