ಮಳೆಗಾಲ ಆರಂಭಗೊಳ್ಳುತ್ತಿದ್ದು, ಇದರಿಂದ ಉಂಟಾಗುವ ಪ್ರಾಕೃತಿಕ ವಿಕೋಪದ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಕುರಿತು ಬುಧವಾರ ಸುಳ್ಯ ತಹಶೀಲ್ದಾರ್ ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ಪಿಡಿಒ, ಗ್ರಾಮ ಲೆಕ್ಕಾಧಿಕಾರಿಗಳ ಸಭೆಯು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ವೇದಿಕೆಯಲ್ಲಿ
ತಾಲೂಕು ಪಂಚಾಯತ್ ಇ.ಒ. ಭವಾನಿಶಂಕರ್ ಉಪಸ್ಥಿತರಿದ್ದರು.
ಪ್ರಾಕೃತಿಕ ವಿಕೋಪ ಸಂಭವಿಸಿದರೆ ತಕ್ಷಣ ಕ್ರಮ ಕೈಗೊಳ್ಳಲು ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ತಂಡಗಳನ್ನು ರಚಿಸಿಕೊಳ್ಳಬೇಕು. ಪ್ರತೀ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಿಕೊಳ್ಳಬೇಕು ಎಂದು ತಹಶೀಲ್ದಾರ್ ಸೂಚನೆ ನೀಡಿದರು.
ಅಪಾಯಕಾರಿ ಮರಗಳು ಕಂಡುಬಂದರೆ ಅವುಗಳನ್ನು ಕಡಿಯಲು ಕ್ರಮ ಕೈಗೊಳ್ಳಬೇಕು. ಚರಂಡಿ, ಮೋರಿಗಳನ್ನು ಸ್ವಚ್ಚ ಮಾಡಿ ಮಳೆಯ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಬೇಕು. ಮನೆಗಳಿಗೆ ಹಾನಿ ಸಂಭವಿಸಿ ಜನರಿಗೆ ಸಮಸ್ಯೆ ಆದರೆ ಕಾಳಜಿ ಕೇಂದ್ರ ತೆರೆಯಲು ಸಿದ್ಧರಾಗಿರಬೇಕು. ಗುಡ್ಡ ಕುಸಿತ ಸಂಭವಿಸಬಹುದಾದ ಪ್ರದೇಶದ ಜನರಿಗೆ ಮೊದಲೇ ಸೂಚನೆ ನೀಡಿ ಅವರನ್ನು ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.
ಗ್ರಾಮ ಮಟ್ಟದ ಅಧಿಕಾರಿಗಳು ಇಂತಹ ಸಂದರ್ಭಗಳಲ್ಲಿ ರಜೆ ಹಾಕದೇ ಕೇಂದ್ರ ಸ್ಥಾನದಲ್ಲೇ ಇರಬೇಕು. ತಾಲೂಕು ಕಚೇರಿಯಲ್ಲಿ ವಿಪತ್ತು ನಿರ್ವಹಣೆಗೆ ಕಂಟ್ರೋಲ್ ರೂಂ ತೆರೆಯಲಾಗಿದ್ದು, (08257-231231) ಅದು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುತ್ತದೆ ಎಂದು ತಹಶೀಲ್ದಾರ್ ಸಭೆಗೆ ಮಾಹಿತಿ ನೀಡಿದರು. ಗ್ರಾಮ ಮಟ್ಟದ ಅಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
- Thursday
- November 21st, 2024