Ad Widget

ಕ್ಯಾಪ್ಟನ್ ಬ್ರಿಜೇಶ್ ಚೌಟರಿಗೆ ಒಲಿದ ಮಂಗಳೂರು ಕ್ಷೇತ್ರದ ಟಿಕೆಟ್ – ಎಲೆಮರೆಯ ಕಾಯಿಯಂತಿದ್ದ ಚೌಟರ ಹಿನ್ನೆಲೆಯೇನು?

ನಿವೃತ್ತ ಸೇನಾಧಿಕಾರಿ, ಮಂಗಳೂರಿನ ಯುವ ನಾಯಕ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬೃಜೇಶ್ ಚೌಟ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ.

ಭಾರತೀಯ ಭೂಸೇನೆಯಲ್ಲಿ ಕ್ಯಾಪ್ಟನ್ ಆಗಿ ಸ್ವಯಂ ನಿವೃತ್ತಿ ಪಡೆದು ಸಮಾಜ ಸೇವೆಗೆ ಇಳಿದ ಯುವ ನಾಯಕನನ್ನು ಬಿಜೆಪಿ ಸಂಸತ್ ಸ್ಪರ್ಧೆಯ ಟಿಕೆಟ್ ನೀಡಿದೆ. ಮಂಗಳೂರಿನ ರಥಬೀದಿಯಲ್ಲಿ ನೆಲೆಸಿರುವ ಕ್ಯಾಪ್ಟನ್ ಬೃಜೇಶ್ ಚೌಟ ಕಾಲೇಜು ದಿನಗಳಲ್ಲಿಯೇ ಎನ್ ಸಿಸಿಯಲ್ಲಿ ತೊಡಗಿಕೊಂಡಿದ್ದು ಮಂಗಳೂರು ವಿವಿಯಲ್ಲಿ ಅತ್ಯುತ್ತಮ ಕೆಡೆಟ್ ಎಂಬ ಹೆಗ್ಗಳಿಕೆ ಪಡೆದಿದ್ದರು.

ಮಂಗಳೂರಿನ ಮಿಲಾಗ್ರಿಸ್ ಸ್ಕೂಲ್‌ನಲ್ಲಿ ಪ್ರಾಥಮಿಕ ಶಿಕ್ಷಣ, ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪಿಯು ಮತ್ತು ಬಿಎಸ್ಸಿ ಪದವಿ ಪೂರೈಸಿದ್ದ ಚೌಟ ಬಳಿಕ ಮಧ್ಯಪ್ರದೇಶದ ಇಂದೋರ್ ಐಐಎಂನಲ್ಲಿ ಉನ್ನತ ಶಿಕ್ಷಣ ಪಡೆದಿದ್ದರು. ಯುಪಿಎಸ್ಸಿ ಮೂಲಕ ಡಿಫೆನ್ಸ್ ಪರೀಕ್ಷೆ ಬರೆದು ತೇರ್ಗಡೆಗೊಂಡು ಚೆನ್ನೈನಲ್ಲಿ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಭೂಸೇನೆ ಸೇರಿದ್ದರು. ಪ್ರತಿಷ್ಠಿತ ಎಂಟನೇ ಗೋರ್ಖಾ ರೈಫಲ್ಸ್ 7ನೇ ಬೆಟಾಲಿಯನ್ನಲ್ಲಿ ಉತ್ತರ ಭಾರತ ಮತ್ತು ಈಶಾನ್ಯ ರಾಜ್ಯಗಳಲ್ಲಿ ಸೇವೆ ಸಲ್ಲಿಸಿ ಕ್ಯಾಪ್ಟನ್ ಹುದ್ದೆಗೇರಿದ್ದರು.

ಬಾಲ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿ ಸಂಘದ ಪ್ರೇರಣೆಯಿಂದ ಮುಂದೆ ಭಾರತೀಯ ಸೇನೆಗೆ ಸೇರಿದ್ದ ಚೌಟರು ಸೇನಾ ನಿವೃತ್ತಿಯ ಬಳಿಕ ಮಂಗಳೂರಿಗೆ ಆಗಮಿಸಿ ಆರೆಸ್ಸೆಸ್ ನ ವಿವಿಧ ಆಯಾಮಗಳಲ್ಲಿ ತೊಡಗಿಸಿಕೊಂಡು 2013ರಲ್ಲಿ ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸಕ್ರಿಯ ರಾಜಕೀಯಕ್ಕಿಳಿದಿದ್ದರು.‌ 2016-19ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ವಹಿಸಿಕೊಂಡು ಸಂಸದ ನಳಿನ್ ಕುಮಾರ್ ಜತೆಗೂಡಿ ಪಕ್ಷದ ಕೆಲಸ ಮಾಡಿದ್ದರು. 2019ರಲ್ಲಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಚೌಟ, 2023ರ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದ ಪ್ರಭಾರಿಯಾಗಿದ್ದರು. ಇದಲ್ಲದೆ, 2015ರಿಂದ ಕೇರಳ, ಕರ್ನಾಟಕ, ದೆಹಲಿ, ಮಹಾರಾಷ್ಟ್ರದ ಅಸೆಂಬ್ಲಿ ಚುನಾವಣೆ ಸಂದರ್ಭದಲ್ಲಿ ಪಕ್ಷದ ಪರವಾಗಿ ಕರ್ತವ್ಯ ನಿರ್ವಹಿಸಿದ್ದರು. ರಾಜ್ಯ ಬಿಜೆಪಿಯ ಚುನಾವಣಾ ಸಮಿತಿ ಭಾಗವಾಗಿರುವ ಯುವ ಸಂವಾದ ಘಟಕದಲ್ಲಿ ರಾಜ್ಯ ಸಹ ಸಂಚಾಲಕರಾಗಿ ಬೆಂಗಳೂರು ದಕ್ಷಿಣ ಸಂಸದರಾದ ತೇಜಸ್ವಿ ಸೂರ್ಯ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷರಾದ ಅಣ್ಣಮಲೈ ಅವರ ಜೊತೆ ರಾಜ್ಯಾದ್ಯಂತ ಪ್ರವಾಸ ಮಾಡಿದ್ದಾರೆ.

ಪಕ್ಷದ ಚಟುವಟಿಕೆ ಜೊತೆಗೆ ಸಮರ್ಥನ್ ಫೌಂಡೇಶನ್ ಮೂಲಕ ಮಂಗಳೂರಿನಲ್ಲಿ ಸಾಮಾಜಿಕ ಸೇವಾ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಫೌಂಡೇಶನ್ ಮೂಲಕ ತಮ್ಮದೇ ಸ್ನೇಹಿತರನ್ನು ಕಟ್ಟಿಕೊಂಡು ಸದ್ದಿಲ್ಲದೆ ಸೇವಾ ಚಟುವಟಿಕೆಯನ್ನು ನಡೆಸಿದ್ದರು. ಇದಲ್ಲದೆ, ಮೆಟ್ರೋ ಪಾಲಿಟನ್ ನಗರಗಳಲ್ಲಿ ಮಾತ್ರ ಇರುತ್ತಿದ್ದ ಲಿಟ್ ಫೆಸ್ಟ್ ಎನ್ನುವ ರಾಷ್ಟ್ರ ಮಟ್ಟದ ಸಾಹಿತ್ಯ ಕೂಟವನ್ನು ಮಂಗಳೂರಿನಲ್ಲಿ ಸಮಾನ ಮನಸ್ಕರೊಂದಿಗೆ ಸೇರಿ ಸಂಘಟಿಸಿದ್ದರು. ರಾಷ್ಟ್ರೀಯ ಮಟ್ಟದ ವಾಗ್ಮಿಗಳು, ಬೇರೆ ಬೇರೆ ಕ್ಷೇತ್ರದ ಸಾಧಕರನ್ನು ಜೊತೆಗೂಡಿಸಿ ಸಂವಾದ, ಧನಾತ್ಮಕ ಸಾಹಿತ್ಯ ಚಟುವಟಿಕೆಗೆ ವೇದಿಕೆ ಒದಗಿಸಿದ್ದಲ್ಲದೆ, 2019ರಿಂದ ಪ್ರತಿ ವರ್ಷ ಲಿಟ್ ಫೆಸ್ಟ್ ಸಂಘಟಿಸುತ್ತಿದ್ದಾರೆ, ಆಮೂಲಕ ಕಾಲೇಜು ವಿದ್ಯಾರ್ಥಿಗಳಿಗೆ, ಯುವ ಸಾಹಿತ್ಯ ಪ್ರಿಯರಿಗೆ ರಾಷ್ಟ್ರ ಮಟ್ಟದ ದಿಗ್ಗಜರ ಜೊತೆಗೆ ಸಂವಾದಕ್ಕೆ ವೇದಿಕೆ ಸೃಷ್ಟಿಸಿದ್ದರು.

2015ರಲ್ಲಿ ಕರಾವಳಿಯ ಜನಪದ ಕ್ರೀಡೆ ಕಂಬಳ ನಿಷೇಧಕ್ಕೊಳಗಾದ ಸಂದರ್ಭದಲ್ಲಿ ಅದರ ವಿರುದ್ಧ ಹೋರಾಟ ಸಂಘಟಿಸಿದವರಲ್ಲಿ ಕ್ಯಾಪ್ಟನ್ ಬೃಜೇಶ್ ಚೌಟ ಒಬ್ಬರು. ಕಂಬಳಕ್ಕೆ ಒಂದು ಹಂತದ ಜಯ ಸಿಕ್ಕ ಬೆನ್ನಲ್ಲೇ ಮಂಗಳೂರು ನಗರದಲ್ಲಿಯೇ ಕಂಬಳ ಆಯೋಜಿಸಬೇಕೆಂದು ನಿಶ್ಚಯಿಸಿ, ಯುವ ಸ್ನೇಹಿತರ ಬಳಗವನ್ನು ಕಟ್ಟಿಕೊಂಡು ಸತತ ಏಳು ವರ್ಷಗಳಿಂದ ಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಕಂಬಳ ಆಯೋಜಿಸುತ್ತಿದ್ದಾರೆ. ರಾಜ್ಯ ಬಿಜೆಪಿ ಕಾರ್ಯದರ್ಶಿಯಾಗಿರುವ ಬೃಜೇಶ್ ಚೌಟ ಬಂಟ ಸಮುದಾಯದ ಪ್ರಮುಖ ಗುತ್ತಿನ ಮನೆಗೆ ಸೇರಿದ್ದು, ಅವಿವಾಹಿತರಾಗಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!