ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅನಿರ್ಧಿಷ್ಟ ಮುಷ್ಕರ ಕೈಗೊಂಡಿದ್ದ ಗ್ರಾಮ ಆಡಳಿತಾಧಿಕಾರಿಗಳ ಸಂಘದೊಂದಿಗೆ ಸರಕಾರ ನಡೆಸಿದ ಮಾತುಕತೆ ಫಲಪ್ರದವಾಗಿರುವುದರಿಂದ ಮುಷ್ಕರ ಹಿಂಪಡೆದು ಅ.4ರಿಂದ ಕರ್ತವ್ಯಕ್ಕೆ ಗ್ರಾಮ ಆಡಳಿತಾಧಿಕಾರಿಗಳು ಹಾಜರಾಗಿದ್ದಾರೆ.
ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆ.26ರಿಂದ ಗ್ರಾಮ ಆಡಳಿತಾಧಿಕಾರಿಗಳು ಮುಷ್ಕರ ನಡೆಸುತ್ತಿದ್ದರು. ಆರಂಭದಲ್ಲಿ ಸೆ.30ರಂದು ಕಂದಾಯ ಸಚಿವ ಕೃಷ್ಣ ಬೈರೇ ಗೌಡ ಅವರು ಗ್ರಾಮ ಆಡಳಿತಾಧಿಕಾರಿಗಳ ಸಂಘದ ಪದಾಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುವ ಭರವಸೆ ನೀಡಿದ್ದರು. ಆದರೆ ಈ ಕುರಿತು ಲಿಖಿತ ಆದೇಶ ದೊರೆಯದ ಹಿನ್ನೆಲೆಯಲ್ಲಿ ಗ್ರಾಮ ಆಡಳಿತಾಧಿಕಾರಿಗಳು ಮುಷ್ಕರ ಮುಂದುವರಿಸಿದ್ದರು. ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆ ಕುರಿತು ರಾಜ್ಯ ಕಂದಾಯ ಇಲಾಖಾ ನೌಕರರ ಸಂಘದ ಅಧ್ಯಕ್ಷ ಕೃಷ್ಣಮೂರ್ತಿಯವರು ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಅವರು ಗಮನಕ್ಕೆ ತಂದಿದ್ದರು. ಅವರು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಭೇಟಿಯಾಗಿ ಈ ಕುರಿತು ಚರ್ಚಿಸಿದ್ದರು.
ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಸೂಚನೆಯಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ ಅವರು ಅ.3 ರಂದು ಗ್ರಾಮ ಆಡಳಿತಾಧಿಕಾರಿಗಳ ರಾಜ್ಯ, ಜಿಲ್ಲಾ ಸಂಘದ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಗ್ರಾಮ ಆಡಳಿತಾಧಿಕಾರಿ ಗಳ ಬೇಡಿಕೆಗಳನ್ನು ಹಂತ ಹಂತವಾಗಿ ಪರಿಹರಿಸುವ ಕುರಿತು ಸರಕಾರ ಭರವಸೆ ನೀಡಿದ ಮೇರೆಗೆ ಗ್ರಾಮ ಆಡಳುತಾಧಿಕಾರಿಗು ಮುಷ್ಕರ ಹಿಂತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.