ನೀಟ್ ಪರೀಕ್ಷಾ ಅಕ್ರಮ ಮತ್ತು ರಾಮ ಮಂದಿರ ಕಾಣಿಕೆ ಹಣ ದುರ್ಬಳಕೆ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹ: ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ

ಸುಳ್ಯ: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು ಹಾಗೂ ಅಯೋಧ್ಯೆ ಶ್ರೀರಾಮ ಮಂದಿರದ ಕಾಣಿಕೆ ಹುಂಡಿ ಹಣ ದುರ್ಬಳಕೆ ಪ್ರಕರಣಗಳ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿಯು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ಭವಿಷ್ಯ ಮತ್ತು ದೇಶದ ಜನರ ಧಾರ್ಮಿಕ ನಂಬಿಕೆಗಳೊಂದಿಗೆ ಚೆಲ್ಲಾಟ ನಡೆಸುವುದನ್ನು ತಕ್ಷಣ ನಿಲ್ಲಿಸಬೇಕೆಂದು ಆಗ್ರಹಿಸಿದೆ.

. . . . . . . . .

ಜು.17ರಂದು ಸುಳ್ಯದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು ದೇಶದ ಶಿಕ್ಷಣ ವ್ಯವಸ್ಥೆಗೆ ಕಳಂಕವಾಗಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಅತಂತ್ರಗೊಳಿಸಿದೆ ಎಂದು ಆರೋಪಿಸಿದರು.

. . . . . . .

“ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪ್ರಾಮಾಣಿಕವಾಗಿ ಶ್ರಮಿಸಿ ಸಿದ್ಧರಾಗುವ ವಿದ್ಯಾರ್ಥಿಗಳ ವಿಶ್ವಾಸಕ್ಕೆ ಧಕ್ಕೆಯಾಗುವಂತಹ ಘಟನೆಗಳು ದೇಶದ ಶಿಕ್ಷಣ ವ್ಯವಸ್ಥೆಯ ವೈಫಲ್ಯವನ್ನು ಬಯಲಿಗೆಳೆದಿವೆ. ಕಳೆದ ಹಲವು ವರ್ಷಗಳಲ್ಲಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದು, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಕಾರ್ಯವೈಖರಿಯ ಮೇಲಿನ ವಿಶ್ವಾಸವನ್ನೇ ಪ್ರಶ್ನಿಸುವಂತಾಗಿದೆ” ಎಂದು ಅವರು ಹೇಳಿದರು.

ನೀಟ್ ಪರೀಕ್ಷೆಗೆ ಸಂಬಂಧಿಸಿದ ಎಲ್ಲಾ ಅಕ್ರಮಗಳ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಪಾರದರ್ಶಕ ಹಾಗೂ ಸಮಯಬದ್ಧ ತನಿಖೆ ನಡೆಸಬೇಕು. ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಎನ್ಟಿಎಯನ್ನು ಸಂಪೂರ್ಣವಾಗಿ ಪುನರ್ರಚಿಸಿ ಪರೀಕ್ಷಾ ವ್ಯವಸ್ಥೆಯನ್ನು ಸುರಕ್ಷಿತ ಮತ್ತು ವಿಶ್ವಾಸಾರ್ಹವಾಗಿಸಬೇಕು. ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಹಿತದೃಷ್ಟಿಯಿಂದ ಪರಿಣಾಮಕಾರಿ ಕೌನ್ಸೆಲಿಂಗ್ ಹಾಗೂ ಬೆಂಬಲ ವ್ಯವಸ್ಥೆ ರೂಪಿಸಬೇಕು ಎಂದು ಕಾಂಗ್ರೆಸ್ ಪಕ್ಷದ ಪ್ರಮುಖ ಆಗ್ರಹಗಳನ್ನು ಅವರು ಮಂಡಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀಟ್-ಯುಜಿ 2025ಕ್ಕೆ 8,587 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 8,323 ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಸುಮಾರು 1.48 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಪರೀಕ್ಷಾ ವ್ಯವಸ್ಥೆಯ ಮೇಲಿನ ವಿಶ್ವಾಸ ಉಳಿಸಿಕೊಳ್ಳುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಅವರು ತಿಳಿಸಿದರು.

ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಕಾಂಗ್ರೆಸ್ ಪಕ್ಷ, ಎನ್ಎಸ್ಯುಐ ಹಾಗೂ ಯುವ ಕಾಂಗ್ರೆಸ್ ದೇಶಾದ್ಯಂತ ಹೋರಾಟ ನಡೆಸುತ್ತಿದ್ದು, ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿಯು ಈ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಿದೆ ಎಂದರು. ಶಿಕ್ಷಣ ವ್ಯವಸ್ಥೆಯ ಸುಧಾರಣೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಉಪವಾಸ ಸತ್ಯಾಗ್ರಹದ ಬಗ್ಗೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ ವಹಿಸಿರುವುದನ್ನೂ ಅವರು ಟೀಕಿಸಿದರು.

ಇದೇ ವೇಳೆ ಅಯೋಧ್ಯೆಯ ಶ್ರೀರಾಮ ಮಂದಿರದ ಕಾಣಿಕೆ ಹುಂಡಿಯ ಹಣ, ಚಿನ್ನ ಹಾಗೂ ಬೆಳ್ಳಿ ದುರ್ಬಳಕೆ ಪ್ರಕರಣದ ಕುರಿತು ಮಾತನಾಡಿದ ಅವರು, ಈ ಪ್ರಕರಣವು ದೇಶದ ಕೋಟ್ಯಂತರ ರಾಮಭಕ್ತರ ನಂಬಿಕೆಗೆ ದ್ರೋಹವಾಗಿದೆ ಎಂದು ಆರೋಪಿಸಿದರು.

“ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ದೇಶದ ಜನರು ಭಕ್ತಿಯಿಂದ ನೀಡಿದ ದೇಣಿಗೆಯನ್ನು ದುರ್ಬಳಕೆ ಮಾಡಿರುವ ಆರೋಪಗಳು ಅತ್ಯಂತ ಗಂಭೀರವಾಗಿವೆ. ಈ ಪ್ರಕರಣದಲ್ಲಿ ಬಂಧನಗಳು ನಡೆದಿದ್ದರೂ, ಹಿಂದೂಪರ ಸಂಘಟನೆಗಳು ಮತ್ತು ಬಿಜೆಪಿ ನಾಯಕರು ಮೌನ ವಹಿಸಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಶ್ರೀರಾಮನನ್ನು ಯಾವುದೇ ರಾಜಕೀಯ ಪಕ್ಷ ಅಥವಾ ಸಂಘಟನೆ ಗುತ್ತಿಗೆ ಪಡೆದಿಲ್ಲ. ಮಂದಿರದ ಹಣದ ದುರ್ಬಳಕೆ ಕುರಿತು ಪ್ರಶ್ನಿಸುವ ಹಕ್ಕು ಪ್ರತಿಯೊಬ್ಬ ಭಾರತೀಯನಿಗೂ ಇದೆ” ಎಂದು ಹೇಳಿದರು.

ಶ್ರೀರಾಮ ಮಂದಿರ ಟ್ರಸ್ಟ್ನ ಹಣಕಾಸು ವ್ಯವಹಾರಗಳ ಕುರಿತು ಸಂಪೂರ್ಣ ಪಾರದರ್ಶಕ ತನಿಖೆ ನಡೆಸಬೇಕು. ಪ್ರಕರಣದ ಪ್ರಮುಖ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಕೇಂದ್ರ ಸರ್ಕಾರ ಈ ಕುರಿತು ಸ್ಪಷ್ಟನೆ ನೀಡಬೇಕು ಎಂದು ಅವರು ಆಗ್ರಹಿಸಿದರು.

ರಾಮ ಮಂದಿರದ ಕಾಣಿಕೆ ಹಣ ದುರ್ಬಳಕೆಯ ಆರೋಪಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರ ಮೌನ ವಹಿಸಿರುವುದನ್ನು ಪ್ರಶ್ನಿಸಿದ ಅವರು, “ದೇಶದ ಜನರ ಧಾರ್ಮಿಕ ನಂಬಿಕೆ ಮತ್ತು ಭಾವನೆಗಳೊಂದಿಗೆ ಯಾರೂ ಆಟವಾಡಬಾರದು. ಈ ಪ್ರಕರಣದಲ್ಲಿ ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನಿನ ಮುಂದೆ ಉತ್ತರದಾಯಕರಾಗಬೇಕು” ಎಂದರು.

ದೇಶದ ಯುವಜನತೆಯ ಭವಿಷ್ಯ ಹಾಗೂ ಧಾರ್ಮಿಕ ನಂಬಿಕೆಗಳ ರಕ್ಷಣೆಗೆ ಕಾಂಗ್ರೆಸ್ ಪಕ್ಷ ನಿರಂತರವಾಗಿ ಹೋರಾಟ ನಡೆಸಲಿದ್ದು, ಶಿಕ್ಷಣ ವ್ಯವಸ್ಥೆ ಮತ್ತು ಧಾರ್ಮಿಕ ಸಂಸ್ಥೆಗಳ ಆಡಳಿತದಲ್ಲಿ ಪಾರದರ್ಶಕತೆ ಕಾಪಾಡುವುದು ಕೇಂದ್ರ ಸರ್ಕಾರದ ಕರ್ತವ್ಯವಾಗಿದೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿಯು ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ, ಸುಳ್ಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಬ್ದುಲ್ ಗಫೂರ್ ಕಲ್ಮಡ್ಕ ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading