ಸುಬ್ರಹ್ಮಣ್ಯಕ್ಕೆ 24/7 ತುರ್ತು ಚಿಕಿತ್ಸಾ ಘಟಕ ; ಸೆ.02ರಂದು ಸಹಿ ಅಭಿಯಾನ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ 24 ಗಂಟೆಗಳ ತುರ್ತು ಚಿಕಿತ್ಸಾ ಘಟಕವನ್ನು ಕೂಡಲೇ ಆರಂಭಿಸಬೇಕು ಎಂದು ಆಗ್ರಹಿಸಿ ಸೆ.02ರಂದು ಸಾರ್ವಜನಿಕ ಸಹಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಈ ಕುರಿತು ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಲಾಯಿತು.

. . . . . . . . .

“ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಿದ್ದು, ಸುತ್ತಮುತ್ತಲಿನ ಗ್ರಾಮಗಳ ಜನರೂ ಆರೋಗ್ಯ ಸೇವೆಗಾಗಿ ಸುಬ್ರಹ್ಮಣ್ಯವನ್ನೇ ಅವಲಂಬಿಸಿದ್ದಾರೆ. ಆದರೆ ತುರ್ತು ಸಂದರ್ಭಗಳಲ್ಲಿ ತಕ್ಷಣದ ವೈದ್ಯಕೀಯ ಸೇವೆ ದೊರೆಯದೆ ರೋಗಿಗಳನ್ನು ದೂರದ ಆಸ್ಪತ್ರೆಗೆ ಕರೆದೊಯ್ಯಬೇಕಾದ ಪರಿಸ್ಥಿತಿ ಇದೆ. ಇದರಿಂದ ಅಮೂಲ್ಯ ಸಮಯ ವ್ಯರ್ಥವಾಗಿ ರೋಗಿಗಳ ಜೀವಕ್ಕೆ ಅಪಾಯ ಎದುರಾಗುತ್ತಿದೆ” ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

. . . . . . .

“ಹಿಂದೆಯೂ ಇಂತಹ ಹಲವು ಘಟನೆಗಳು ನಡೆದಿದ್ದು, ಕೆಲ ತಿಂಗಳ ಹಿಂದಷ್ಟೇ ಆಂಧ್ರಪ್ರದೇಶ ಮೂಲದ ವ್ಯಕ್ತಿಯೊಬ್ಬರು ದೇವಸ್ಥಾನದ ಆವರಣದಲ್ಲಿ ಹೃದಯಾಘಾತಕ್ಕೆ ಒಳಗಾದ ಸಂದರ್ಭದಲ್ಲಿ ತಕ್ಷಣ ಚಿಕಿತ್ಸೆ ನೀಡಲು ಅಗತ್ಯ ವೈದ್ಯಕೀಯ ವ್ಯವಸ್ಥೆ ಹಾಗೂ ವೈದ್ಯರ ಲಭ್ಯತೆ ಇಲ್ಲದೆ ದೂರದ ಮಂಗಳೂರಿಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದರು. ಈ ಘಟನೆಯು ಸುಬ್ರಹ್ಮಣ್ಯದಲ್ಲಿ 24 ಗಂಟೆಗಳ ತುರ್ತು ಚಿಕಿತ್ಸಾ ಸೌಲಭ್ಯದ ಅಗತ್ಯವನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ” ಎಂದು ಹೇಳಿದರು.

“ಅಪಘಾತ, ಹೃದಯಾಘಾತ ಸೇರಿದಂತೆ ಯಾವುದೇ ತುರ್ತು ಆರೋಗ್ಯ ಪರಿಸ್ಥಿತಿಯಲ್ಲಿ ‘ಗೋಲ್ಡನ್ ಅವರ್’ನಲ್ಲಿ ಚಿಕಿತ್ಸೆ ದೊರೆಯುವುದು ಅತ್ಯಂತ ಮುಖ್ಯ. ಆದರೆ ಸುಬ್ರಹ್ಮಣ್ಯದಲ್ಲಿ ತುರ್ತು ಸಂದರ್ಭಗಳಲ್ಲಿ ಸೂಕ್ತ ವೈದ್ಯಕೀಯ ಸೇವೆ ಸಕಾಲದಲ್ಲಿ ದೊರೆಯದಿರುವುದರಿಂದ ರೋಗಿಗಳನ್ನು ದೂರದ ಆಸ್ಪತ್ರೆಗಳಿಗೆ ಕರೆದೊಯ್ಯಬೇಕಾಗಿದೆ. ಹೀಗಾಗಿ ಲಕ್ಷಾಂತರ ಭಕ್ತರು ಆಗಮಿಸುವ ಪ್ರಮುಖ ಧಾರ್ಮಿಕ ಕ್ಷೇತ್ರವಾಗಿರುವ ಸುಬ್ರಹ್ಮಣ್ಯದಲ್ಲಿ 24×7 ತುರ್ತು ಚಿಕಿತ್ಸಾ ಘಟಕವನ್ನು ಸ್ಥಾಪಿಸುವುದು ಅತ್ಯಗತ್ಯ” ಎಂದು ಒತ್ತಾಯಿಸಿದರು.

“ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸುಬ್ರಹ್ಮಣ್ಯದ ಆಸ್ಪತ್ರೆಯಲ್ಲಿ 24 ಗಂಟೆಯೂ ವೈದ್ಯರು ಲಭ್ಯವಾಗುವ ವ್ಯವಸ್ಥೆ ಮಾಡಬೇಕು. ತುರ್ತು ಚಿಕಿತ್ಸೆಗೆ ಅಗತ್ಯವಿರುವ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳು, ತರಬೇತಿ ಪಡೆದ ಸಿಬ್ಬಂದಿ ಹಾಗೂ ಸೂಕ್ತ ಮೂಲಸೌಕರ್ಯಗಳನ್ನು ಒದಗಿಸಿ ಸ್ಥಳೀಯರು ಮತ್ತು ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ಅನುಕೂಲವಾಗುವಂತೆ ಆಸ್ಪತ್ರೆಯನ್ನು ಅಭಿವೃದ್ಧಿಪಡಿಸಬೇಕು” ಎಂದು ಆಗ್ರಹಿಸಿದರು.

“ಈ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತರುವ ನಿಟ್ಟಿನಲ್ಲಿ ಸೆ.02ರಂದು ಬೆಳಗ್ಗೆ 10 ಗಂಟೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಮುಂಭಾಗದಲ್ಲಿ ಸಾರ್ವಜನಿಕ ಸಹಿ ಸಂಗ್ರಹ ಅಭಿಯಾನ ನಡೆಯಲಿದೆ. ಸಾರ್ವಜನಿಕರು, ಭಕ್ತರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ” ಮನವಿ ಮಾಡಿದರು.

“ಈ ಅಭಿಯಾನ ಯಾವುದೇ ರಾಜಕೀಯ ಪಕ್ಷಕ್ಕೆ ಸೀಮಿತವಾಗಿರದೆ, ಪಕ್ಷಾತೀತವಾಗಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಎಲ್ಲರೂ ಒಗ್ಗೂಡಿ ನಡೆಸುತ್ತಿರುವ ಹೋರಾಟವಾಗಿದೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸುವ ಲಕ್ಷಾಂತರ ಭಕ್ತರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಸರ್ಕಾರ ಕೂಡಲೇ ಸ್ಪಂದಿಸಿ 24/7 ತುರ್ತು ಚಿಕಿತ್ಸಾ ಘಟಕವನ್ನು ಸ್ಥಾಪಿಸಬೇಕು” ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಡಬ ತಾಲೂಕು ಕೆಡಿಪಿ ಸದಸ್ಯ ಶಿವರಾಮ ರೈ, ಮಾಜಿ ಸೈನಿಕ ಸುಬ್ರಹ್ಮಣ್ಯ ಕುಮಾರಧಾರ, ಗೋಪಾಲ್ ಎಣ್ಣೆಮಜಲು, ಡಾ. ರವಿ ಕಕ್ಕೆಪದವು, ಪವನ್ ಎಂ.ಡಿ., ದೀಪಕ್ ನಂಬಿಯಾರ್, ದೇವಿಚಾರಣ್ ಹಾಗೂ ಚಂದ್ರಶೇಖರ್ ನಾಯರ್ ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading