ಸುಳ್ಯದಲ್ಲಿ ಗಾಂಧಿಸ್ಮೃತಿ, ಬೃಹತ್ ಜನಜಾಗೃತಿ ಸಮಾವೇಶ | “ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಡವರ ಬದುಕು ಕಟ್ಟಿಕೊಡುವ ಕಾರ್ಯ ಮಾಡುತ್ತಿದೆ” : ಭಾಗೀರಥಿ ಮುರುಳ್ಯ

“ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಜನರಲ್ಲಿ ಶಿಸ್ತು ಬೆಳೆಸುವುದರ ಜೊತೆಗೆ ಅನೇಕ ಕುಟುಂಬಗಳ ಬದುಕಿನಲ್ಲಿ ಅಭಿವೃದ್ಧಿಗೆ ಕಾರಣವಾಗಿದೆ. ಶಿಕ್ಷಣ ಕ್ಷೇತ್ರವನ್ನು ಉಳಿಸಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪ್ರೋತ್ಸಾಹ ನೀಡುತ್ತಾ, ಗೌರವಯುತವಾಗಿ ಬಡವರ ಬದುಕನ್ನು ಕಟ್ಟಿಕೊಡುವ ಕಾರ್ಯವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ” ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.

. . . . . . . . .

ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.), ದಕ್ಷಿಣ ಕನ್ನಡ ಜಿಲ್ಲೆ-2ರ ವತಿಯಿಂದ ಗಾಂಧಿ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಅ. 5ರಂದು ಸುಳ್ಯದ ಕೇರ್ಪಳ ಬೂಡಿನ ಆಶಾ ಪ್ರಕಾಶ್ ಶೆಟ್ಟಿ ಬಂಟರ ಸಮುದಾಯ ಭವನದಲ್ಲಿ ನಡೆದ ಗಾಂಧಿಸ್ಮೃತಿ ಮತ್ತು ಬೃಹತ್ ಜನಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

. . . . . . .

ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಧರ್ಮಸ್ಥಳದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್., “ನಮ್ಮತನ ಹಾಗೂ ಸಂಸ್ಕೃತಿಯನ್ನು ಉಳಿಸಿಕೊಳ್ಳಲು ಮಹಾತ್ಮ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯದ ತತ್ವಗಳು ದಾರಿದೀಪವಾಗಿವೆ. ಸತ್ಯದ ಮೂಲಕ ದೇಶವನ್ನು ಮುನ್ನಡೆಸುವ ಮಾರ್ಗವನ್ನು ಗಾಂಧೀಜಿ ತೋರಿಸಿಕೊಟ್ಟಿದ್ದಾರೆ. ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಯ ಕನಸು ಕಂಡಿದ್ದ ಗಾಂಧೀಜಿಯವರ ಆಶಯಗಳನ್ನು ಪೂಜ್ಯ ಖಾವಂದರು ಕಾರ್ಯರೂಪಕ್ಕೆ ತರುತ್ತಿದ್ದಾರೆ ಎಂದರು.ಗ್ರಾಮೀಣ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಹಲವು ವಿನೂತನ ಪ್ರಯೋಗಗಳನ್ನು ಕೈಗೊಂಡಿದೆ. ಗ್ರಾಮೀಣ ಶಾಲೆಗಳ ಮಕ್ಕಳಿಗಾಗಿ 75 ಸಾವಿರ ಬೆಂಚ್-ಡೆಸ್ಕ್‌ಗಳನ್ನು ನೀಡುವ ಕಾರ್ಯ ನಡೆಯುತ್ತಿದೆ. ಜನಜಾಗೃತಿ ಪರಿಕಲ್ಪನೆಯಡಿ ಮದ್ಯವರ್ಜನ ಶಿಬಿರಗಳನ್ನು ಆಯೋಜಿಸುವ ಮೂಲಕ ಗ್ರಾಮೀಣ ಜನರ ಬದುಕಿನಲ್ಲಿ ಬದಲಾವಣೆ ತರಲಾಗುತ್ತಿದೆ. ಸುಳ್ಯ ತಾಲೂಕಿನಲ್ಲಿ ಗ್ರಾಮೀಣ ಸೊಗಡನ್ನು ಉಳಿಸಿ ಬೆಳೆಸುವ ಸಂಕಲ್ಪ ಮಾಡಬೇಕು” ಎಂದು ಅವರು ಕರೆ ನೀಡಿದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ದಕ್ಷಿಣ ಕನ್ನಡ ಜಿಲ್ಲೆ-2ರ ಅಧ್ಯಕ್ಷ ಎನ್. ವಿಶ್ವನಾಥ ರೈ ಕಳಂಜ ಮಾತನಾಡಿ, “ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಸೇರಿದ ಎಲ್ಲ ಸದಸ್ಯರು ಒಂದೇ ಕುಟುಂಬದಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಮಹಾತ್ಮ ಗಾಂಧೀಜಿ ಕಂಡ ಕನಸನ್ನು ನನಸು ಮಾಡುವ ಕಾರ್ಯವನ್ನು ಪೂಜ್ಯ ಖಾವಂದರು ಮಾಡುತ್ತಿದ್ದಾರೆ. ಪ್ರತಿಯೊಂದು ಗ್ರಾಮದಲ್ಲೂ ಸರ್ಕಾರ ಮಾಡಬೇಕಾದ ಹಲವು ಸಮಾಜಮುಖಿ ಕಾರ್ಯಗಳನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳು ಕೈಗೊಂಡು ಜನರ ಬದುಕಿನಲ್ಲಿ ಬದಲಾವಣೆ ತರುತ್ತಿದ್ದಾರೆ” ಎಂದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌ನ ರಾಜ್ಯ ಸಂಘಟನಾಧ್ಯಕ್ಷ ನಟರಾಜ ಬಾದಾಮಿ, ಪುತ್ತೂರು ವಿಭಾಗದ ಪೊಲೀಸ್ ಉಪ ಅಧೀಕ್ಷಕ ಪ್ರಮೋದ್ ಕುಮಾರ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಸುಳ್ಯ ತಾಲೂಕು ಸ್ಥಾಪಕಾಧ್ಯಕ್ಷ ಎನ್.ಎ. ರಾಮಚಂದ್ರ, ದಕ್ಷಿಣ ಕನ್ನಡ ಜಿಲ್ಲಾ ಘಟಕದ ನಿಕಟಪೂರ್ವ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಸುಳ್ಯ ತಾಲೂಕು ಪ್ರಾಥಮಿಕ ಸಹಕಾರಿ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಸುರೇಶ್ ಕಣೆಮರಡ್ಕ, ಬಂಟರ ಯಾನೆ ನಾಡವರ ಸಂಘ (ರಿ.) ಸುಳ್ಯ ತಾಲೂಕು ಅಧ್ಯಕ್ಷ ಸುಭಾಶ್ಚಂದ್ರ ರೈ ತೋಟ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಅಧ್ಯಕ್ಷ ಎಂ. ವೆಂಕಪ್ಪ ಗೌಡ, ಕಡಬ ತಾಲೂಕು ಅಧ್ಯಕ್ಷ ಇಂದುಶೇಖರ ಶೆಟ್ಟಿ, ಪುತ್ತೂರು ತಾಲೂಕು ಅಧ್ಯಕ್ಷ ಸತೀಶ್ ನಾಯ್ಕ, ಕಾಸರಗೋಡು ತಾಲೂಕು ಅಧ್ಯಕ್ಷ ಜಯರಾಮ ಪಾಟಾಳಿ ಹಾಗೂ ಮಂಜೇಶ್ವರ ತಾಲೂಕು ಅಧ್ಯಕ್ಷ ಮಂಜುನಾಥ ಆಳ್ವ ಉಪಸ್ಥಿತರಿದ್ದರು.

ವಿಶೇಷವಾಗಿ ಸುಳ್ಯ ವಲಯದ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಅಧ್ಯಕ್ಷೆ ಸವಿತಾ ಸಂದೇಶ್ ಅವರು ‘ವೈಷ್ಣವ ಜನತೋ’ ಭಜನೆ ಹಾಡಿದರು.

ಆರತಿ ಪುರುಷೋತ್ತಮ್ ಪ್ರಾರ್ಥಿಸಿದರು. ದಕ್ಷಿಣ ಕನ್ನಡ ಜಿಲ್ಲೆ-2ರ ಜಿಲ್ಲಾ ನಿರ್ದೇಶಕ ಎ. ಬಾಬು ನಾಯ್ಕ ಸ್ವಾಗತಿಸಿದರು. ಸುಳ್ಯ ತಾಲೂಕು ಕಾರ್ಯದರ್ಶಿ ಮಾಧವ ಗೌಡ ವಂದಿಸಿದರು. ಕಡಬ ತಾಲೂಕು ಕಾರ್ಯದರ್ಶಿ ಪ್ರಕಾಶ್ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌ನ ಜನಜಾಗೃತಿ ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿವಿಧ ಅನುದಾನಗಳನ್ನು ವಿತರಿಸಿ ಫಲಾನುಭವಿಗಳನ್ನು ಗೌರವಿಸಲಾಯಿತು. ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಲಾಯಿತು. ಶಾಸಕಿ ಭಾಗೀರಥಿ ಮುರುಳ್ಯ, ಪೊಲೀಸ್ ಉಪ ಅಧೀಕ್ಷಕ ಪ್ರಮೋದ್ ಕುಮಾರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ಹಾಗೂ ರಾಜ್ಯ ಸಂಘಟನಾಧ್ಯಕ್ಷ ನಟರಾಜ ಬಾದಾಮಿ ಅವರನ್ನು ಸನ್ಮಾನಿಸಲಾಯಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading