ಕಳೆದ ಕೆಲವು ದಿನಗಳಿಂದ ಚರ್ಚೆಯ ಕೇಂದ್ರಬಿಂದು ಆಗಿದ್ದ ಸಾರ್ವಜನಿಕ ಗಣೇಶೋತ್ಸವ ಆಚರಣೆಯ ಬಗ್ಗೆ ಕೊನೆಗೂ ರಾಜ್ಯ ಸರ್ಕಾರ ನಿರ್ಧಾರ ಪ್ರಕಟಿಸಿದೆ.
ಸೆ.05 ರಂದು ತಮ್ಮ ಗೃಹ ಕಛೇರಿ ಕೃಷ್ಣಾದಲ್ಲಿ ತಜ್ಞರ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಿದ್ದಾರೆ.
ದೇವಸ್ಥಾನಗಳಲ್ಲಿ ಗಣೇಶ ಮೂರ್ತಿ ಸ್ಥಾಪಿಸಲು ಅವಕಾಶ ನೀಡಲಾಗಿದ್ದು ಸಾರ್ವಜನಿಕ ಗಣೇಶೋತ್ಸವವನ್ನು ಸರಳವಾಗಿ ಆಚರಿಸಬೇಕು. ಅದ್ದೂರಿ ಆಚರಣೆಗೆ ಅವಕಾಶವಿಲ್ಲ, ಯಾವುದೇ ಸಾಂಸ್ಕೃತಿಕ ಹಾಗೂ ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ, ಹೆಚ್ಚು ಗದ್ದಲಕ್ಕೆ ಅವಕಾಶವಿಲ್ಲದಂತೆ ಸರಳ ಹಾಗೂ ಸಾಂಪ್ರದಾಯಿಕವಾಗಿ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಲಾಗಿದೆ.
ಅದೇ ರೀತಿ ಕೋವಿಡ್ ಪಾಸಿಟಿವಿಟಿ ರೇಟ್ ಶೇ.2 ಕ್ಕಿಂತ ಕಡಿಮೆ ಇರುವ ಪ್ರದೇಶಗಳಲ್ಲಿ ಮಾತ್ರ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಲಾಗಿದ್ದು ಪಾಸಿಟಿವಿಟಿ ರೇಟ್ ಶೇ.2 ಕ್ಕಿಂತ ಹೆಚ್ಚಿರುವ ಪ್ರದೇಶಗಳಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶವಿಲ್ಲ. ಹಾಗೂ ಹಳ್ಳಿಗಳಲ್ಲಿ ಸ್ಥಳೀಯಾಡಳಿತದ ಷರತ್ತುಗಳು ಅನ್ವಯವಾಗಲಿವೆ.
ಗಣೇಶ ಮೂರ್ತಿ ವಿಸರ್ಜನೆಯ ಸಂಧರ್ಭದಲ್ಲೂ ಮೆರವಣಿಗೆ ಹಾಗೂ ಉತ್ಸವ ಮಾಡುವುದಕ್ಕೆ ನಿರ್ಬಂಧ ವಿಧಿಸಲಾಗಿದ್ದು ಹೆಚ್ಚು ಜನ ಸೇರದಂತೆ ಎಚ್ಚರ ವಹಿಸಬೇಕು ಹಾಗೂ ಕೊರೋನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚನೆ ನೀಡಲಾಗಿದೆ. ಅದೇ ರೀತಿ ಗಣೇಶನ ದರ್ಶನಕ್ಕೆ ಬರುವ ಭಕ್ತಾದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಥರ್ಮಲ್ ಸ್ಕ್ರೀನಿಂಗ್ ಮತ್ತು ಸ್ಯಾನಿಟೈಸ್ ಕಡ್ಡಾಯಗೊಳಿಸಿ ಆದೇಶಿಸಿದೆ.