ರಕ್ತದಾನ ಎಲ್ಲಾ ದಾನಗಳಿಗಿಂತ ಶ್ರೇಷ್ಠವಾದುದು, ಒಬ್ಬ ರಕ್ತದಾನ ಮಾಡುವ ಮೂಲಕ ಮೂರು ಜೀವಗಳನ್ನು ಉಳಿಸಲು ಸಾಧ್ಯವಿದೆ. ಹಾಗಾಗಿ ರಕ್ತ ಜೀವ ಉಳಿಸುವ ಸಂಜೀವಿನಿಯಾಗಿದೆ. ಎಂದು ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜಿನ ಬ್ಲಡ್ ಬ್ಯಾಂಕ್ ಅಧಿಕಾರಿ ಡಾ. ಮಹಂತ ದೇವರು ಅಭಿಪ್ರಾಯಪಟ್ಟರು. ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಹಮ್ಮಿಕೊಂಡ ರಕ್ತದಾನದ ಮಹತ್ವದ ಕುರಿತ ಮಾಹಿತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ರಕ್ತದಾನ ಜೀವವನ್ನು ಉಳಿಸುವ ಕೆಲಸದ ಜೊತೆಗೆ ರಕ್ತದಾನಿಗಳಲ್ಲಿ ಹೊಸ ರಕ್ತ ಹೊಸ ಚೈತನ್ಯವನ್ನು ನೀಡುತ್ತದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರು ರಕ್ತದಾನ ಮಾಡುವ ಮಹತ್ವದ ಕಾರ್ಯದಲ್ಲಿ ತೊಡಗಿಸಿಕೊಳ್ಳಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀಮತಿ ರತ್ನಾವತಿ ಡಿ ಮಾತನಾಡಿ ರಕ್ತದಾನದ ಮಹತ್ವವನ್ನು ಪ್ರತಿಯೊಬ್ಬ ಪ್ರಜೆಯೂ ತಿಳಿದುಕೊಳ್ಳಬೇಕಾದ ಅಗತ್ಯವಿದೆ. ಆ ನಿಟ್ಟಿನಲ್ಲಿ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಉತ್ತಮವಾದ ಕಾರ್ಯಕ್ರಮವನ್ನು ಆಯೋಜನೆ ಮಾಡುವುದರೊಂದಿಗೆ ಸಮಾಜಮುಖಿ ಕಾರ್ಯವನ್ನು ಮಾಡುತ್ತಿದೆ. ಅದನ್ನು ತಮ್ಮ ಜೀವನದಲ್ಲಿ ಸದುಪಯೋಗಪಡಿಸಿಕೊಳ್ಳಿ ಎಂದರು.
ಕಾರ್ಯಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿ ವೇದಿಕೆಯಲ್ಲಿ ಉಪಸ್ಥಿತರಿದ್ದು ಪ್ರಾಸ್ತಾವಿಕವಾಗಿ ಮಾತನಾಡಿದರು. ಘಟಕ ನಾಯಕರಾದ ಲಿಮಿತಾ ಪಿ ಜೆ ಹಾಗೂ ನಿರಂಜನ ಕೆ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ರೆಡ್ ಕ್ರಾಸ್ ಗೀತೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮವನ್ನು ಡಾ. ಮಹಂತ ದೇವರು ದೀಪ ಬೆಳಗಿ ಉದ್ಘಾಟಿಸಿದರು. ಸೋನಿಕ ಸ್ವಾಗತಿಸಿ, ಶುಭ ವಂದಿಸಿದರು. ಲತಾಶ್ರೀ ಕಾರ್ಯಕ್ರಮ ನಿರೂಪಿಸಿದರು.
- Thursday
- November 21st, 2024