ಕಳೆದ ಎರಡು ವರ್ಷಗಳ ಹಿಂದೆ ಕೊಡಗು ಹಾಗೂ ಜೋಡುಪಾಲದ ಕೆಲವು ಭಾಗಗಳಲ್ಲಿ ಭಾರಿ ಮಳೆ ಮತ್ತು ಭೂಕುಸಿತಕ್ಕೆ ನಿರಾಶ್ರಿತರಾದ ನೆರೆ ಸಂತ್ರಸ್ತರಿಗೆ ಪ್ರಾಕೃತಿಕ ವಿಕೋಪದಡಿಯಲ್ಲಿ 800 ಕೋಟಿ ರೂಪಾಯಿಗಳನ್ನು ಮೀಸಲಿಟ್ಟು ಕಳೆದ ಬಾರಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಹಣವನ್ನು ಬಿಡುಗಡೆ ಮಾಡಿ ಕಾಮಗಾರಿಗೆ ವೇಗದ ಚಾಲನೆ ನೀಡಿದರು .ಅದರ ಪರಿಣಾಮವಾಗಿ ಕೊಡಗಿನ ಸೋಮವಾರಪೇಟೆ ತಾಲ್ಲೂಕು ಜಂಬೂರು ಗ್ರಾಮದಲ್ಲಿ ಅತ್ಯುತ್ತಮವಾಗಿ ನಿರ್ಮಿಸಲ್ಪಟ್ಟ 380 ಮನೆಗಳು ಜೂ.,4 ರಂದು ಫಲಾನುಭವಿಗಳಿಗೆ ಹಸ್ತಾಂತರಿಸಲಾಯಿತು. ಆದರೆ ಇದಕ್ಕೆ ಕಾರಣಕರ್ತರಾದ ಆಗಿನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಸೌಜನ್ಯಕ್ಕಾಗಿ ಆಹ್ವಾನಿಸದೆ, ನೆನಪಿಸಿದ ಕ್ರತಗ್ನತೆ ಯ ಕಾರ್ಯಕ್ರಮ ಇದಾಗಿತ್ತು ಎಂದು ವಿರೋಧಿಸಿ ಜನತಾ ದಳ ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡರು.
ಕೊಡಗು ಜಿಲ್ಲಾಡಳಿತದ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ವಸತಿ ಸಚಿವ ವಿ ಸೋಮಣ್ಣ ಹಾಗೂ ಕಂದಾಯ ಸಚಿವ ಆರ್ ಅಶೋಕ್ ರವರ ನೇತೃತ್ವದಲ್ಲಿ ಮನೆ ಹಸ್ತಾಂತರ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಮುಖ್ಯ ದ್ವಾರದ ಮುಂಭಾಗದಲ್ಲಿ ಕೊಡಗು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಗಣೇಶ್ ರವರ ನೇತೃತ್ವದಲ್ಲಿ ಸುಮಾರು 80ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಬಿಜೆಪಿ ಸರ್ಕಾರಕ್ಕೆ ಧಿಕ್ಕಾರವನ್ನು ಕೂಗಿ ಪ್ರತಿಭಟಿಸಲು ಮುಂದಾದರು .ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಪೊಲೀಸ್ ವಾಹನದಲ್ಲಿ ಕೊಂಡೊಯ್ದರು.ರಾಜ್ಯ ಜನತಾ ದಳ ಉಪಾಧ್ಯಕ್ಷ ಎಂ. ಬಿ. ಸದಾಶಿವ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.