ಅಕ್ರಮ ಜಾನುವಾರು ಸಾಗಾಟ, ಹತ್ಯೆ ಮತ್ತು ಸಾಗಿಸುವ ವಾಹನ,ಜನರ ಮೇಲೆ ಸಾರ್ವಜನಿಕರು ಹಲ್ಲೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಖಡಕ್ ಸೂಚನೆ ರವಾನಿಸಿದ್ದಾರೆ.
ಜು. 27 ರಂದು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರು, ಮುಖ್ಯ ಪಶುವೈದ್ಯಾಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ.
ಅಕ್ರಮ ಜಾನುವಾರು ಸಾಗಾಟ ಕಂಡುಬಂದರೇ ಪೊಲೀಸರಿಗೆ ಮೊದಲ ಮಾಹಿತಿ ನೀಡಬೇಕು. ಇಂತಹ ಸಂದರ್ಭ ಸಾರ್ವಜನಿಕರು ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದರು.
ಬಕ್ರೀದ್ ಹಾಗೂ ಇತರ ಹಬ್ಬಗಳ ಸಂದರ್ಭ ಜಾನುವಾರುಗಳ ಅಕ್ರಮ ಸಾಗಾಟ ಮತ್ತು ವಧೆಯನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಸರಕಾರದ ನಿಯಮಗಳನ್ನು ಉಲ್ಲಂಘಿಸುವಂತಿಲ್ಲ. ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಹಾಗೂ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅವರು ಸೂಚಿಸಿದರು.