ರಾಜ್ಯದ ಪ್ರಸಿದ್ಧ ಪುಣ್ಯ ಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ಡಿ.12 ಗುರುವಾರದಂದು ಕೊಪ್ಪರಿಗೆ ಇಳಿಯುವುದರೊಂದಿಗೆ ಸಂಪನ್ನಗೊಂಡಿತು.
ಮುಂಜಾನೆ ಶ್ರೀ ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಸೀತರಾಮ ಎಡಪಡಿತ್ತಾಯರು ವೈದಿಕ ವಿಧಿ-ವಿಧಾನಗಳನ್ನು ನೆರವೇರಿಸಿದರು. ಬಳಿಕ ಸುಮುಹೂರ್ತದಲ್ಲಿ ಕೊಪ್ಪರಿಗೆಯನ್ನು ಪೂರ್ವ ಶಿಷ್ಠ ಸಂಪ್ರದಾಯದ ಪ್ರಕಾರ ಇಳಿಸಲಾಯಿತು.
ಎಲ್ಲಾ ದೇವಾಲಯಗಳಲ್ಲಿ ಕೊಡಿ ಏರಿ ಜಾತ್ರೆ ಆರಂಭವಾದರೆ ಕುಕ್ಕೆ ಕ್ಷೇತ್ರದಲ್ಲಿ ಕೊಪ್ಪರಿಗೆ ಏರುವುದರ ಮೂಲಕ ಜಾತ್ರೆ ಆರಂಭವಾಗಿತ್ತು. ಗುರುವಾರ ಕೊಪ್ಪರಿಗೆ ಇಳಿಯುವುದರೊಂದಿಗೆ ಜಾತ್ರೆ ಸಮಾಪ್ತಿಯಾಯಿತು. ಈ ದಿನ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಶ್ರೀ ದೇವರ ಕೊಪ್ಪರಿಗೆ ಅನ್ನದ ಭೋಜನ ಪ್ರಸಾದ ಸ್ವೀಕರಿಸಿದರು.
ಉತ್ಸವದ ನಿಮಿತ್ತ ಶ್ರೀ ದೇವಳದ ಹೊರಾಂಗಣದ ಸುತ್ತಲೂ ಮಧ್ಯಾಹ್ನದ ನಂತರ ನೀರು ತುಂಬಿಸಲಾಗಿತ್ತು. ರಾತ್ರಿ ಮಹಾಪೂಜೆಯ ಬಳಿಕ ನೀರಿನಲ್ಲಿ ಶ್ರೀ ದೇವರ ದೀಪಾರಾಧನೆಯುಕ್ತ ಪಾಲಕಿ ಉತ್ಸವ ಆರಂಭವಾಯಿತು. ನಂತರ ನೀರಿನಲ್ಲಿ ಶ್ರೀ ದೇವರ ಶೇಷವಾಹನಯುಕ್ತ ಬಂಡಿ ರಥೋತ್ಸವ ನಡೆಯಿತು. ಬಳಿಕ ವಿವಿಧ ಸಂಗೀತ ಸುತ್ತುಗಳ ಪಾಲಕಿ ಉತ್ಸವ ನೀರಿನಲ್ಲಿ ನಡೆಯಿತು. ವರ್ಷದಲ್ಲಿ ಒಮ್ಮೆ ಮಾತ್ರ ನಡೆಯುವ ಈ ಉತ್ಸವವು ಬೇರೆ ಯಾವುದೇ ದೇವಳದಲ್ಲಿ ಕಾಣಸಿಗುವುದಿಲ್ಲ. ಈ ಉತ್ಸವದೊಂದಿಗೆ ಚಂಪಾಷಷ್ಠಿ ಉತ್ಸವಗಳು ಸಮಾಪ್ತಿ ಗೊಂಡಿತು. ಈ ವಿಶಿಷ್ಠ ಉತ್ಸವವನ್ನು ಸಹಸ್ರಾರು ಭಕ್ತರು ವೀಕ್ಷಿಸಿ ಕೃತಾರ್ಥರಾದರು.
ಪುಟಾಣಿಗಳೊಂದಿಗೆ ನೀರಾಡಿದ ಯಶಸ್ವಿ:
ಶ್ರೀ ದೇವಳದ ಆನೆ ಯಶಸ್ವಿಯು ಹೊರಾಂಗಣದಲ್ಲಿ ನೀರು ತುಂಬಿಸಿದುದರಿಂದ ಹೆಚ್ಚಿನ ಸಂಭ್ರಮವನ್ನು ಪಟ್ಟಿತು. ನೀರಿನಲ್ಲಿ ಹೊರಳಾಡಿ ಸಂತೋಷ ಪಡುವುದರೊಂದಿಗೆ, ತನಗೆ ನೀರು ಹಾರಿಸಿದ ಪುಟಾಣಿ ಮಕ್ಕಳ ಮೇಲೆ ತನ್ನ ಕಾಲು ಹಾಗೂ ಸೊಂಡಿಲಿನಿಂದ ನೀರು ಎರಚಿ, ಮಕ್ಕಳೊಂದಿಗೆ ನೀರಾಟವಾಡಿ, ತಾನು ಸಂಭ್ರಮ ಪಡುವುದರೊಂದಿಗೆ, ಭಕ್ತಾಧಿಗಳಿಗೂ ಹೆಚ್ಚಿನ ಸಂತಸವನ್ನು ನೀಡಿತು. ಅಲ್ಲದೆ ನೀರಿನಲ್ಲಿ ಪುಟಾಣಿ ಮಕ್ಕಳು ಒದ್ದೆಯಾಗಿ ಆಟವಾಡುತ್ತಿದ್ದರು.
ಈ ಸಂದರ್ಭದಲ್ಲಿ ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿಗಳಾದ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿಗಳಾದ ಯೇಸುರಾಜ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಮಲ್ಲಿಕಾ ಪಕ್ಕಳ, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಾದ ಸತೀಶ್ ಕೂಜುಗೋಡು, ಲೋಲಾಕ್ಷ ಕೈಕಂಬ, ಪವನ್ ಎಂ.ಡಿ, ಅಚ್ಯುತ್ತ ಗೌಡ ಆಲ್ಕಬೆ, ದೇವಳದ ನಿವೃತ್ತ ಇ.ಒ ಡಾ.ನಿಂಗಯ್ಯ, ಅಧೀಕ್ಷಕರಾದ ಪದ್ಮನಾಭ ಶೆಟ್ಟಿಗಾರ್, ಅಕೌಂಟೆಟ್ ರಾಜಲಕ್ಷ್ಮಿ ಶೆಟ್ಟಿಗಾರ್, ದೇವಳದ ಹೆಬ್ಬಾರ್ ಪ್ರಸನ್ನ ಭಟ್, ಪಾಟಾಳಿ ಲೋಕೇಶ್ ಎ.ಆರ್, ಸೇರಿದಂತೆ ದೇವಳದ ಸಿಬ್ಬಂದಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.
ಇಂದಿನಿಂದ ಸರ್ಪಸಂಸ್ಕಾರ ಸೇವೆ ಆರಂಭ:
ಶ್ರೀ ಕ್ಷೇತ್ರದ ಜಾತ್ರೆಯ ಅವಧಿಯಲ್ಲಿ ಶ್ರೀ ದೇವಳದ ವಿಶೇಷ ಸೇವೆಗಳಲ್ಲಿ ಒಂದಾದ ಸರ್ಪಸಂಸ್ಕಾರ ನಡೆಯುವುದಿಲ್ಲ. ಗುರುವಾರ ಕೊಪ್ಪರಿಗೆ ಇಳಿಯುವುದರೊಂದಿಗೆ ಜಾತ್ರೆ ಮುಕ್ತಾಯವಾಗಿರುವುದರಿಂದ ಡಿ.13 ರಿಂದ ದೇವಳದ ಪ್ರಧಾನ ಸೇವೆಯಾದ ಸರ್ಪಸಂಸ್ಕಾರ ಸೇವೆ ಪುನರಾರಂಭಗೊಳ್ಳಲಿದೆ.
- Wednesday
- December 18th, 2024