ಕೋಲ್ಚಾರು: ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಕೋಲ್ಚಾರು ಇಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ಆಚರಿಸಲಾಯಿತು. ಕಾರ್ಯಕ್ರಮವು ಸಂವಿಧಾನ ಗೀತೆಯ ಗಾಯನದೊಂದಿಗೆ ಗೌರವಯುತವಾಗಿ ಆರಂಭಗೊಂಡಿತು.
ಕಾರ್ಯಕ್ರಮವನ್ನು ಸುಳ್ಯ ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶ ಸಿ. ಚಿರಾಗ್ ಅವರು ಉದ್ಘಾಟಿಸಿದರು. ಶಾಲಾ ಪಾಲನಾ ಮತ್ತು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕರುಣಾಕರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ನ್ಯಾಯವಾದಿ ಭಾಸ್ಕರ ಪಿ. ರಾವ್, ಸುಳ್ಯ ಅವರು ಬಾಲ ಕಾರ್ಮಿಕ ಪದ್ಧತಿಯ ದುಷ್ಪರಿಣಾಮಗಳು, ಮಕ್ಕಳ ಹಕ್ಕುಗಳು, ಶಿಕ್ಷಣದ ಮಹತ್ವ ಹಾಗೂ ಬಾಲಕಾರ್ಮಿಕರನ್ನು ತಡೆಗಟ್ಟಲು ಜಾರಿಯಲ್ಲಿರುವ ಕಾನೂನುಗಳ ಕುರಿತು ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡಿದರು.
ಸುಳ್ಯ ವಕೀಲರ ಸಂಘ ಅಧ್ಯಕ್ಷ  ಸುಕುಮಾರ್ ಕೋಡ್ತುಗುಳಿ, ಸುಳ್ಯ ನ್ಯಾಯಾಲಯದ ಸರ್ಕಾರಿ ಅಭಿಯೋಜಕಿ ಪ್ರೀತಿ ಎಂ.ಸಿ.,  ವಕೀಲ ಧರ್ಮಪಾಲ ಕೊಯಿಂಗಾಜೆ, ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೋಲ್ಚಾರಿನ ಮುಖ್ಯ ಗುರು ಚಿನ್ನಸ್ವಾಮಿ ಶೆಟ್ಟಿ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಮೌಲ್ಯಯುತ ಮಾರ್ಗದರ್ಶನ ನೀಡಿದರು.
ತಮ್ಮ ಭಾಷಣಗಳಲ್ಲಿ ಗಣ್ಯರು ಬಾಲ ಕಾರ್ಮಿಕ ಪದ್ಧತಿ ಸಮಾಜಕ್ಕೆ ಕಳಂಕವಾಗಿದ್ದು, ಪ್ರತಿಯೊಬ್ಬ ಮಗುವಿಗೂ ಶಿಕ್ಷಣ, ಸುರಕ್ಷತೆ ಹಾಗೂ ಉತ್ತಮ ಭವಿಷ್ಯವನ್ನು ಒದಗಿಸುವುದು ಸಮಾಜದ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು. ಮಕ್ಕಳನ್ನು ಕಾರ್ಮಿಕರನ್ನಾಗಿ ಬಳಸುವುದು ಕಾನೂನುಬಾಹಿರವಾಗಿದ್ದು, ಪ್ರತಿಯೊಬ್ಬರೂ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು. ವಿದ್ಯಾರ್ಥಿಗಳು ತಮ್ಮ ಹಕ್ಕುಗಳ ಬಗ್ಗೆ ಅರಿವು ಹೊಂದಿ ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.

. . . . . . . . .

ಈ ಸಂದರ್ಭದಲ್ಲಿ ಮಮತಾ ಕೆ.ವಿ., ಮನು ಕುಮಾರ್ ಸಿ.ಎಂ.,  ವಿನುತಾ, ವಂದನಾ, ನಿರ್ಮಲ, ಭವ್ಯ ಹಾಗೂ ಅಡುಗೆ ಸಿಬ್ಬಂದಿಗಳು ಶ್ರಮವಹಿಸಿ ಸಹಕರಿಸಿದರು. ಶಾಲೆಯ ಎಲ್ಲಾ ಶಿಕ್ಷಕರು, ನ್ಯಾಯಾಲಯದ ಸಿಬ್ಬಂದಿ ಐಶ್ವರ್ಯ ಹಾಗೂ ಇತರ ಸಿಬ್ಬಂದಿಗಳು ಭಾಗವಹಿಸಿದ್ದರು.  ಹಾಗೂ ವಿದ್ಯಾರ್ಥಿಗಳು ಭಾಗಿಯಾದರು.
ಕಾರ್ಯಕ್ರಮದಲ್ಲಿ ಆಂಗ್ಲಭಾಷಾ ಶಿಕ್ಷಕ ಶ್ರೀರಂಗನಾಥ ಎಂ.ಎಸ್. ಸ್ವಾಗತಿಸಿ, ಸಹಶಿಕ್ಷಕಿ ಜಲಜಾಕ್ಷಿ ನಿರೂಪಿಸಿದರು.
ಕಾರ್ಯಕ್ರಮದ ಬಳಿಕ ಆಗಮಿಸಿದ ಗಣ್ಯ ಅತಿಥಿಗಳು ಶಾಲೆಯ ವಿವಿಧ ಸೌಲಭ್ಯಗಳು, ಶೈಕ್ಷಣಿಕ ಚಟುವಟಿಕೆಗಳು, ವಿದ್ಯಾರ್ಥಿಗಳ ಸಾಧನೆಗಳು ಹಾಗೂ ಶಾಲೆಯ ಸಮಗ್ರ ಅಭಿವೃದ್ಧಿ ಕಾರ್ಯಗಳನ್ನು ಅವಲೋಕಿಸಿದರು. ಶಾಲೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ನವೀನ ಶೈಕ್ಷಣಿಕ ಕಾರ್ಯಕ್ರಮಗಳು, ಶಿಸ್ತುಬದ್ಧ ವಾತಾವರಣ, ಶಿಕ್ಷಕರ ಸಮರ್ಪಣಾ ಮನೋಭಾವ ಹಾಗೂ ವಿದ್ಯಾರ್ಥಿಗಳ ಪ್ರತಿಭೆಯನ್ನು ಅವರು ಮುಕ್ತಕಂಠದಿಂದ ಶ್ಲಾಘಿಸಿದರು. ವಿಶೇಷವಾಗಿ ಶಾಲೆಯ ಪ್ರಗತಿಪರ ಕಾರ್ಯಚಟುವಟಿಕೆಗಳು, ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ನೀಡುತ್ತಿರುವ ಆದ್ಯತೆ ಹಾಗೂ ಸಮಾಜಮುಖಿ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

. . . . . . .

ಇಂತಹ ಕಾನೂನು ಅರಿವು ಮತ್ತು ಜಾಗೃತಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಉತ್ತಮ ಮೌಲ್ಯಗಳನ್ನು ಬೆಳೆಸುವುದರ ಜೊತೆಗೆ ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತವೆ ಎಂದು ಗಣ್ಯರು ಅಭಿಪ್ರಾಯಪಟ್ಟರು. ಶಾಲೆಯ ಸಾಧನೆಗಳು ಮುಂದಿನ ದಿನಗಳಲ್ಲಿ ಇನ್ನಷ್ಟು ಎತ್ತರಕ್ಕೇರಲಿ ಎಂದು ಶುಭ ಹಾರೈಸಿದರು.

ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಬಾಲ ಕಾರ್ಮಿಕ ಪದ್ಧತಿ ವಿರೋಧಿ ಅರಿವು ಮೂಡಿಸುವುದರ ಜೊತೆಗೆ ಮಕ್ಕಳ ಹಕ್ಕುಗಳು ಹಾಗೂ ಶಿಕ್ಷಣದ ಮಹತ್ವದ ಕುರಿತು ಜಾಗೃತಿ ಮೂಡಿಸುವಲ್ಲಿ ಅತ್ಯಂತ ಯಶಸ್ವಿಯಾಗಿ ನೆರವೇರಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading