ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಕೆಆರ್‌ಎಸ್ ಪತ್ರಿಕಾಗೋಷ್ಠಿ; ಕಠಿಣ ಕ್ರಮಕ್ಕೆ ಆಗ್ರಹ

2026ರ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ಅನ್ಯಾಯಕ್ಕೊಳಗಾದ ವಿದ್ಯಾರ್ಥಿಗಳು ಹಾಗೂ ಪೋಷಕರು ಈ ಹೋರಾಟದಲ್ಲಿ ಭಾಗವಹಿಸಬೇಕು. ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳ ಸ್ಪಂದನೆ ಅತ್ಯಂತ ಅಗತ್ಯವಾಗಿದೆ” ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾಧ್ಯಕ್ಷ ವೇಣುಗೋಪಾಲ್ ಹೇಳಿದರು.

. . . . . . . . .

ಅವರು ಸುಳ್ಯದ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಪಕ್ಷದ ಮುಖಂಡರು, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದ ನಾಲ್ಕು ದಿನಗಳಿಂದ ಪಕ್ಷದ ವತಿಯಿಂದ ಸತ್ಯಾಗ್ರಹ ನಡೆಯುತ್ತಿದ್ದು, ರಾಜ್ಯದಾದ್ಯಂತ ಈ ಕುರಿತು ಜನಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

. . . . . . .

ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಈ ಪ್ರಕರಣದ ಕುರಿತು ಸಮಗ್ರ ಹಾಗೂ ಸ್ವತಂತ್ರ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು. ವರ್ಷಪೂರ್ತಿ ಶ್ರಮಿಸಿ ಪರೀಕ್ಷೆಗೆ ಸಿದ್ಧತೆ ನಡೆಸಿದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ಸರ್ಕಾರ ಹಾಗೂ ಪರೀಕ್ಷಾ ವ್ಯವಸ್ಥೆಯ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಆರೋಪಿಸಿದರು.

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕು. ಪ್ರಕರಣವನ್ನು ಸ್ವತಂತ್ರ ನ್ಯಾಯಾಂಗ ತನಿಖಾ ಆಯೋಗಕ್ಕೆ ವಹಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಅವರಿಗೆ ರಾಜಕೀಯ ಆಶ್ರಯ ನೀಡಿರುವವರನ್ನೂ ಪತ್ತೆಹಚ್ಚಿ ಶಿಕ್ಷೆಗೆ ಒಳಪಡಿಸಬೇಕು. ವಿದ್ಯಾರ್ಥಿಗಳ ಮಾನಸಿಕ ಒತ್ತಡ ಹಾಗೂ ಕುಟುಂಬಗಳ ಆರ್ಥಿಕ ಸಂಕಷ್ಟಕ್ಕೆ ಕಾರಣವಾದ ಅಂಶಗಳ ಬಗ್ಗೆಯೂ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕೆಂದು ಒತ್ತಾಯಿಸಿದರು.

ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಸ್ಪಷ್ಟ ಪರಿಹಾರ ಕ್ರಮಗಳನ್ನು ಸರ್ಕಾರ ಘೋಷಿಸಬೇಕು. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಪಾರದರ್ಶಕ ಪರೀಕ್ಷಾ ವ್ಯವಸ್ಥೆಯನ್ನು ಜಾರಿಗೊಳಿಸಬೇಕೆಂದು ಅವರು ತಿಳಿಸಿದರು.

ಸರ್ಕಾರವು ತಕ್ಷಣ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ, ವಿದ್ಯಾರ್ಥಿ ಸಂಘಟನೆಗಳೊಂದಿಗೆ ಕೈಜೋಡಿಸಿ ಪ್ರತಿಭಟನೆ, ಧರಣಿ, ಬಹಿರಂಗ ಸಭೆ ಹಾಗೂ ಮೆರವಣಿಗೆಗಳ ಮೂಲಕ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಅದೇ ರೀತಿ ಸುಳ್ಯ ತಾಲೂಕಿನ ವಿವಿಧ ಸಮಸ್ಯೆಗಳ ಕುರಿತು ಅಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ. ತಾಲೂಕಿನಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದ್ದರೂ ಸಂಬಂಧಿಸಿದ ಇಲಾಖೆ ಅಗತ್ಯ ಕ್ರಮ ಕೈಗೊಳ್ಳದಿರುವುದನ್ನು ಅವರು ಖಂಡಿಸಿದರು. ಕೊಡಿಯಾಲಬೈಲಿನಲ್ಲಿ ನಿರ್ಮಾಣಗೊಂಡಿರುವ ಗೋಶಾಲೆ ಪಾಲು ಬಿದ್ದಿದ್ದು, ಅದನ್ನು ಶೀಘ್ರದಲ್ಲೇ ಕಾರ್ಯಾರೂಪಕ್ಕೆ ತರುವಂತೆ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್ ಪೆರಾವು, ಜಿಲ್ಲಾ ಕಾರ್ಯದರ್ಶಿ ಸಿಜು, ಶಶಿಧರ, ಶಿವರಾಜು, ವಿನ್ನಿ ಪಿಂಟೋ, ಸಜಿ, ಸುಳ್ಯ ತಾಲೂಕು ಘಟಕದ ಉಪಾಧ್ಯಕ್ಷ ಕೃಷ್ಣೆ ಗೌಡ, ತಾಲೂಕು ಘಟಕದ ಕಾರ್ಯದರ್ಶಿ ದಿನೇಶ್ ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading