ಸುಳ್ಯ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ 80ನೇ ಸ್ವಾತಂತ್ರ್ಯ ಸಂಭ್ರಮ; ಗ್ರಾಮ ಗ್ರಾಮ ಅಭಿವೃದ್ಧಿಯಾದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ಭಾಗೀರಥಿ ಮುರುಳ್ಯ

ಸುಳ್ಯ: ಭ್ರಷ್ಟಾಚಾರ ಮುಕ್ತ ನಾಗರಿಕ ಸಮಾಜ ನಿರ್ಮಾಣವಾದಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯ. ಎಲ್ಲ ಶಾಲೆಗಳಲ್ಲೂ ಶಿಕ್ಷಕರ ಹುದ್ದೆಗಳು ಭರ್ತಿಯಾದಾಗ ಶಿಕ್ಷಣ ಪರಿಪೂರ್ಣವಾಗುತ್ತದೆ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.

. . . . . . . . .

ಅವರು ಸುಳ್ಯದ ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಸುಳ್ಯ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆ. 15ರಂದು ನಡೆದ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಆರೋಗ್ಯ ಮತ್ತು ಶಿಕ್ಷಣದ ಗುಣಮಟ್ಟ ಸುಧಾರಿಸಬೇಕು. ದೇಶ ಕಾಯುವ ಯೋಧರಿಗೆ ಗೌರವ ನೀಡುವುದರ ಜತೆಗೆ ಮಹಿಳೆಯರಿಗೂ ಸಂಪೂರ್ಣ ಸ್ವಾತಂತ್ರ್ಯ ಹಾಗೂ ಸಮಾನ ಅವಕಾಶ ದೊರೆಯಬೇಕು. ಗ್ರಾಮಗಳು ಅಭಿವೃದ್ಧಿಯಾದಾಗ ಮಾತ್ರ ದೇಶ ಅಭಿವೃದ್ಧಿಯಾಗಲು ಸಾಧ್ಯ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಹೇಳಿದರು.

. . . . . . .

ಸುಳ್ಯ ತಾಲೂಕು ತಹಶೀಲ್ದಾರ್ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷೆ ಮಂಜುಳಾ ಎಂ. ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಎಸ್‌ಐ ಕೃಷ್ಣ ಜಿ.ಬಿ. ಅವರ ನೇತೃತ್ವದಲ್ಲಿ ಪಥಸಂಚಲನ ನಡೆಯಿತು.

ಸಾವಯವ ಕೃಷಿ ಹಾಗೂ ಹೈನುಗಾರಿಕೆಯಲ್ಲಿ ಮಾದರಿ ಕೃಷಿಕರಾಗಿರುವ ಡಿ.ಎಸ್. ಚಂದ್ರಶೇಖರ, ನಿವೃತ್ತ ಸೈನಿಕ ತಿರುಮಲೇಶ್ವರ ಸಣ್ಣಮನೆ ಹಾಗೂ ದಯಾನಂದ ಪಿ.ಕೆ. ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಸುಳ್ಯ ನ.ಪಂ. ಮುಖ್ಯಾಧಿಕಾರಿ ಬಸವರಾಜ್, ಸುಳ್ಯ ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲ ಮೋಹನ್ ಬೊಮ್ಮೆಟ್ಟಿ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಗುರುಪ್ರಸಾದ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಸುಳ್ಯ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ಮುಸ್ತಫಾ, ದ.ಕ. ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ಹಾಗೂ ಸುಳ್ಯ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶಾಹುಲ್ ಹಮೀದ್ ಉಪಸ್ಥಿತರಿದ್ದರು.

ತಾ.ಪಂ. ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಕಾರ್ಯದರ್ಶಿ ವೈ.ಎಸ್. ಹರಗಿ ವಂದಿಸಿದರು. ಜಯನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಮಮತಾ ಕೆ.ಎಸ್. ಕಾರ್ಯಕ್ರಮ ನಿರೂಪಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading