ಸುಬ್ರಹ್ಮಣ್ಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ – “ಸ್ವಾಸ್ಥ್ಯ ಸಮಾಜದಿಂದ ಶಸಕ್ತ ರಾಷ್ಟ್ರ ನಿರ್ಮಾಣ” : ಭಾನುಪ್ರಕಾಶ್ ಪೆರುಮುಂಡ

ಸುಬ್ರಹ್ಮಣ್ಯ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ(ರಿ.) ಸುಳ್ಯ ತಾಲೂಕು ಮತ್ತು ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವು ಆ. 24ರಂದು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ನಡೆಯಿತು.

. . . . . . . . .

ಕಾಲೇಜಿನ ಪ್ರೌಢ ಶಾಲಾ ವಿಭಾಗದ ಮುಖ್ಯ ಶಿಕ್ಷಕರಾದ ನಂದಾ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಸುಳ್ಯ ತಾಲೂಕಿನ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ವಿಮಲಾ ರಂಗಯ್ಯ ಅವರು ಉದ್ಘಾಟಿಸಿದರು. ಅವರು ಮಾತನಾಡಿ, “ವಿದ್ಯಾರ್ಥಿ ಜೀವನದಲ್ಲಿ ಯಾರೂ ಕೂಡ ದುಶ್ಚಟಕ್ಕೆ ಬಲಿಯಾಗಬಾರದು. ಪ್ರತಿಯೊಬ್ಬರು ಮುಂದಿನ ಜೀವನದಲ್ಲಿ ದೇಶದ ಉತ್ತಮ ಪ್ರಜೆಯಾಗಿ ಬಾಳಬೇಕು ಎಂದು ಕರೆ ನೀಡಿದರು.      

. . . . . . .

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಸುಳ್ಯದ ನ್ಯಾಯವಾದಿ ಭಾನುಪ್ರಕಾಶ್ ಪೆರುಮುಂಡ ಅವರು ಮಾತನಾಡುತ್ತಾ, “ವಿದ್ಯಾರ್ಥಿ ಜೀವನದಲ್ಲಿ ಹದಿಹರೆಯದ ವಯಸ್ಸಿನಲ್ಲಿ ಬೀಡಿ, ಸಿಗರೇಟ್, ತಂಬಾಕು, ಗಾಂಜಾ, ಮದ್ಯ ಸೇವನೆ, ಗುಟ್ಕಾ ಇಂತಹ ಮಾದಕ ವಸ್ತುಗಳ ಸೇವನೆಗೆ ಬಲಿಯಾಗುತ್ತಿದ್ದಾರೆ. ಇಂತಹ ದುಶ್ಚಟಗಳಿಂದ ವಿದ್ಯಾರ್ಥಿಗಳ ಜೀವನ ಹಾಳಾಗುವುದಲ್ಲದೆ ಆರೋಗ್ಯದಲ್ಲಿ ದುಷ್ಪರಿಣಾಮಗಳು ಉಂಟಾಗುತ್ತದೆ. ಮೊಬೈಲ್ ಬಳಕೆಯೂ ಕೂಡ ದೊಡ್ಡ ದುಷ್ಪರಿಣಾಮ ಬೀರುತ್ತಿದೆ. ಇದನ್ನು ಮಾಧ್ಯಮಗಳಲ್ಲಿನ ಅನೇಕ ಉದಾಹರಣೆಗಳಿಂದ ನೋಡಬಹುದು. ಆದ್ದರಿಂದ ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಉತ್ತಮ ಶಿಕ್ಷಣ ಪಡೆದು ಆದರ್ಶ ಪ್ರಜೆಗಳಾಗಿ ಬಾಳಬೇಕು. ದೇಶದಲ್ಲಿ ಸ್ವಾಸ್ಥ್ಯ ಸಮಾಜವನ್ನು ನಾವೆಲ್ಲರೂ ಸೇರಿ ನಿರ್ಮಾಣ ಮಾಡಬೇಕು” ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರಾದ ಸತೀಶ್ ಟಿ.ಎನ್ ಪ್ರಾಸ್ತವಿಕವಾಗಿ ಮಾತನಾಡಿದರು. ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಗಿರಿಧರ ಸುಂದರ ಅವರು ಶುಭಕೋರಿದರು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ರತ್ನಾವತಿ, ಸುಬ್ರಹ್ಮಣ್ಯ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಶೈಲಜಾ, ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ ಕೆ. ಉಪಸ್ಥಿತರಿದ್ದರು. ಸೇವಾಪ್ರತಿನಿಧಿ ಶೈಲಜಾ ಸ್ವಾಗತಿಸಿದರು. ಬಾಲಕೃಷ್ಣ ಗೌಡ ಕೆ. ಕಾರ್ಯಕ್ರಮ ನಿರೂಪಿಸಿದರು. ಪ್ರೌಢ ಶಾಲಾ ಗಣಿತ ಶಿಕ್ಷಕರಾದ ಕೃಷ್ಣ ಭಟ್ ಧನ್ಯವಾದವಿತ್ತರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading