ಮಂಗಳೂರಿನಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆಯ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಒತ್ತು ನೀಡಲಿ: ವೆಂಕಟ್ ವಳಲಂಬೆ

ಸುಳ್ಯ: ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಸುತ್ತಿರುವುದನ್ನು ಸ್ವಾಗತಿಸಿರುವ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಜಿಲ್ಲೆಯ ಪ್ರಮುಖ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

. . . . . . . . .

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಿಲ್ಲೆಯಲ್ಲಿ ಯುವಜನರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು, ಸಾರ್ವಜನಿಕರು ಹಾಗೂ ಸರ್ಕಾರಿ ಕಾಮಗಾರಿಗಳಿಗೆ ಅಗತ್ಯವಿರುವ ಮರಳನ್ನು ಸುಲಭವಾಗಿ ಪಡೆಯಲು ಸರಳ ನಿಯಮಗಳನ್ನು ರೂಪಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.

. . . . . . .

ಸುಳ್ಯ, ಕಡಬ, ಬೆಳ್ತಂಗಡಿ, ಪುತ್ತೂರು ಹಾಗೂ ವಿಟ್ಲ ಭಾಗದ ಅಡಿಕೆ ಬೆಳೆಗಾರರನ್ನು ಬಾಧಿಸುತ್ತಿರುವ ಹಳದಿ ರೋಗ ಮತ್ತು ಎಲೆಚುಕ್ಕಿ ರೋಗಕ್ಕೆ ಪರಿಹಾರವಾಗಿ ರೈತರ ಸಾಲಮನ್ನಾ ಸೇರಿದಂತೆ ಬಜೆಟ್‌ನಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಗ್ರಾಮೀಣ ಪ್ರದೇಶಗಳ ಎಸ್‌ಸಿ, ಎಸ್‌ಟಿ ಹಾಗೂ ಇತರ ಬಡವರು ಮತ್ತು ಬಿಪಿಎಲ್ ಕಾರ್ಡ್‌ದಾರರಿಗೆ ಮನೆ ನಿರ್ಮಾಣಕ್ಕಾಗಿ ಕೇರಳ ಮಾದರಿಯಲ್ಲಿ ಕನಿಷ್ಠ 5 ಲಕ್ಷ ರೂ. ಅನುದಾನ ನೀಡುವ ಮಾರ್ಗಸೂಚಿ ರೂಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಸುಸಜ್ಜಿತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ 24×7 ಆಂಬುಲೆನ್ಸ್ ಸೇವೆ ಕಲ್ಪಿಸಬೇಕು. ಸುಳ್ಯ ಮತ್ತು ಕಡಬ ತಾಲೂಕಿನ ರೈತರ ನಿದ್ರೆಗೆಡಿಸಿರುವ ಕಸ್ತೂರಿರಂಗನ್ ವರದಿಯನ್ನು ರೈತರ ಜಮೀನು ಹಾಗೂ ಕೃಷಿ ಪ್ರದೇಶಗಳಿಗೆ ತೊಂದರೆಯಾಗದ ರೀತಿಯಲ್ಲಿ ಅನುಷ್ಠಾನಗೊಳಿಸಬೇಕು. ಈ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಮನವೊಲಿಸಿ ರೈತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಸರ್ಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ಹಾಗೂ ಲಂಚದ ಸಮಸ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಸ್ಪಷ್ಟವಾದ ನೀತಿ ಜಾರಿಗೊಳಿಸಬೇಕು. ವಿವಿಧ ಇಲಾಖೆಗಳಿಗೆ ಸಲ್ಲಿಸುವ ಅರ್ಜಿಗಳನ್ನು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಮಾಡಿ, ಅರ್ಜಿದಾರರಿಗೆ ಯಾವುದೇ ತೊಂದರೆಯಾಗದಂತೆ ಸೇವೆ ಒದಗಿಸುವ ವ್ಯವಸ್ಥೆ ಕಲ್ಪಿಸಬೇಕು ಎಂದು ವೆಂಕಟ್ ವಳಲಂಬೆ ಒತ್ತಾಯಿಸಿದ್ದಾರೆ.

ಸುಳ್ಯ ವಿಧಾನಸಭಾ ಕ್ಷೇತ್ರವು ಮೀಸಲು ಕ್ಷೇತ್ರವಾಗಿದ್ದು, ಭೌಗೋಳಿಕವಾಗಿ ವಿಸ್ತಾರವಾದ ಪ್ರದೇಶವನ್ನು ಹೊಂದಿದೆ. ಕ್ಷೇತ್ರದ ಗ್ರಾಮೀಣ ಭಾಗಗಳ ರಸ್ತೆ ಅಭಿವೃದ್ಧಿಗೆ ಬಜೆಟ್‌ನಲ್ಲಿ ವಿಶೇಷ ಅನುದಾನ ಒದಗಿಸಬೇಕು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಎಲ್ಲ ಪ್ರಮುಖ ಬೇಡಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಜನಪರ ಹಾಗೂ ಅಭಿವೃದ್ಧಿಪರ ನಿರ್ಧಾರಗಳನ್ನು ಕೈಗೊಳ್ಳುವ ವಿಶ್ವಾಸವಿದೆ ಎಂದು ಅವರು ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆಯ ಬಳಿಕ ಕೈಗೊಳ್ಳಲಿರುವ ಮಹತ್ವದ ನಿರ್ಧಾರಗಳನ್ನು ಜಿಲ್ಲೆಯ ಜನತೆ ವಿಶ್ವಾಸದಿಂದ ಎದುರು ನೋಡುತ್ತಿದ್ದು, ಈ ಸಭೆಯ ನಿರ್ಣಯಗಳು ಇಡೀ ರಾಜ್ಯಕ್ಕೆ ಮಾದರಿಯಾಗಲಿ ಎಂದು ವೆಂಕಟ್ ವಳಲಂಬೆ ಹಾರೈಸಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading