ಗುತ್ತಿಗಾರು ವಲಯದ 10 ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ

ವಳಲಂಬೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಸುಳ್ಯ ತಾಲೂಕು ಹಾಗೂ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಗುತ್ತಿಗಾರು ವಲಯದ ಜಂಟಿ ಆಶ್ರಯದಲ್ಲಿ ಗುತ್ತಿಗಾರು ವಲಯದ 10 ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಸೆ.20ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.

. . . . . . . . .

ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ವೆಂಕಪ್ಪ ಗೌಡ ಮಾತನಾಡಿ, ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯ ಸ್ಥಾನಮಾನ ದೊರೆತ ಹಿನ್ನೆಲೆಯಲ್ಲಿ ಹರ್ಷ ವ್ಯಕ್ತಪಡಿಸಿ, ತುಳು ಭಾಷೆಯಲ್ಲೇ ಮಾತನಾಡಿದರು. ಇದೇ ವೇಳೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಚಾರಧಾರೆಗಳು ಹಾಗೂ ವಿವಿಧ ಕಾರ್ಯಕ್ರಮಗಳನ್ನು ಶ್ಲಾಘಿಸಿದರು.

. . . . . . .

ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು. ಭಾಗೀರಥಿ ಮುರುಳ್ಯ ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆಯ ವಿವಿಧ ಕಾರ್ಯಕ್ರಮಗಳಿಂದ ಸಮಾಜದ ಕಟ್ಟಕಡೆಯ ಜನರು ಹಾಗೂ ಮಹಿಳೆಯರು ಮುಖ್ಯವಾಹಿನಿಗೆ ಬರುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ವಿಶ್ವನಾಥ ರೈ ಕಳಂಜ ಅವರು ಯೋಜನೆಯ ಕಾರ್ಯಕ್ರಮಗಳಿಗೆ ಶುಭ ಹಾರೈಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಮಾಧವ ಗೌಡ ಮಾತನಾಡಿ, ಯೋಜನೆಯು ಜನರಿಗೆ ಸಂಸ್ಕಾರ ಮತ್ತು ಸಂಸ್ಕೃತಿಯ ಅರಿವು ಮೂಡಿಸಿದೆ. ಪೂಜ್ಯರ ಯೋಚನೆಗಳು ಯೋಜನೆಯ ಆಸ್ತಿಯಾಗಿದ್ದು, ಜನಮಂಗಳದಂತಹ ಕಾರ್ಯಕ್ರಮಗಳು ಸಮಾಜದಲ್ಲಿರುವ ಅಶಕ್ತರಿಗೆ ಆಶಾಕಿರಣವಾಗಿವೆ. ವಿದ್ಯಾರ್ಥಿಗಳಿಗೆ ನೀಡಲಾಗುವ ವಿದ್ಯಾರ್ಥಿವೇತನ ಹಾಗೂ ಸರ್ಕಾರಿ ಶಾಲೆಗಳಿಗೆ ಜ್ಞಾನದೀಪ ಶಿಕ್ಷಕರ ಒದಗಿಸುವಿಕೆ ಶಿಕ್ಷಣ ಕ್ಷೇತ್ರಕ್ಕೆ ಬಲ ತುಂಬಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಲಯ ಒಕ್ಕೂಟಗಳ ಅಧ್ಯಕ್ಷ ಯೋಗೀಶ್ ದೇವ ವಹಿಸಿದ್ದರು. ಶಾಸಕಿ ಕು. ಭಾಗೀರಥಿ ಮುರುಳ್ಯ ಅವರು ಒಕ್ಕೂಟಗಳ ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಅನಿತಾ ಮಹೇಶ್ ಕೊಪ್ಪತ್ತಡ್ಕ ಅವರನ್ನು ಹಾಗೂ ಸೇವಾ ಪ್ರತಿನಿಧಿಗಳಾಗಿ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿ ಹೊಂದಿದ ಸೌಮ್ಯ, ಲೋಕೇಶ್ವರಿ ಹಾಗೂ ತಿಮ್ಮಪ್ಪ ಕಡ್ಯ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆಯ ನಿಕಟಪೂರ್ವ ಜಿಲ್ಲಾಧ್ಯಕ್ಷ ಪಿ.ಸಿ. ಜಯರಾಮ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ನಿಕಟಪೂರ್ವ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಭಾರತ ಸರ್ಕಾರದ ರಬ್ಬರ್ ಮಂಡಳಿ ಸದಸ್ಯ ಕೇಶವ ಭಟ್ ಮುಳಿಯ, ಮಂಜುನಾಥೇಶ್ವರ ಭಜನಾ ಪರಿಷತ್ ತಾಲೂಕು ಅಧ್ಯಕ್ಷ ಸೋಮಶೇಖರ್ ಪೈಕ, ಜನಜಾಗೃತಿ ವೇದಿಕೆ ವಲಯಾಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಗುತ್ತಿಗಾರು ಮುತ್ತಪ್ಪಶ್ವರ ದೇವಸ್ಥಾನದ ಅಧ್ಯಕ್ಷ ವೆಂಕಟ್ ವಳಲಂಬೆ, ವಲಯ ಭಜನಾ ಪರಿಷತ್ ಅಧ್ಯಕ್ಷ ಪೂರ್ಣಚಂದ್ರ ಪೈಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಗೌರವ ಉಪಸ್ಥಿತರಾಗಿ ಜನಜಾಗೃತಿ ವೇದಿಕೆಯ ಸದಸ್ಯರಾದ ಬಾಬು ಮಾಸ್ಟರ್ ಅಚ್ರಪ್ಪಾಡಿ, ವಿಜಯಕುಮಾರ್ ಚಾರ್ಮಾತ, ಕೇಶವ ಹೊಸೋಳಿಕೆ, ತಾಲೂಕು ಭಜನಾ ಪರಿಷತ್ ನಿರ್ದೇಶಕಿ ರವಿಕಲಾ ಚೆಮ್ನೂರು, ಗುತ್ತಿಗಾರು ಪಿಎಸಿ ಬ್ಯಾಂಕ್ ಅಧ್ಯಕ್ಷ ಜಯಪ್ರಕಾಶ್ ಮೊಗ್ರ, ಗುತ್ತಿಗಾರು ವರ್ತಕರ ಸಂಘದ ಅಧ್ಯಕ್ಷ ವಿನ್ಯಾಸ್ ಕೊಚ್ಚಿ, ಕೇಂದ್ರ ಒಕ್ಕೂಟದ ಅಧ್ಯಕ್ಷ ಸುರೇಶ ಕಣೆಮರಡ್ಕ ಮತ್ತಿತರರು ಭಾಗವಹಿಸಿದ್ದರು. ಮಧ್ಯಾಹ್ನ ಭೋಜನದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಒಕ್ಕೂಟದ ಸದಸ್ಯರಿಗೆ ಹಗ್ಗಜಗ್ಗಾಟ ಸ್ಪರ್ಧೆ ನಡೆಯಿತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಲಯ ಮೇಲ್ವಿಚಾರಕ ರಾಜೇಶ್ ಸ್ವಾಗತಿಸಿದರು. ಹರಿಶ್ಚಂದ್ರ ಕುಳ್ಳಂಪಾಡಿ ಹಾಗೂ ರಮೇಶ್ ಮೆಟ್ಟಿನಡ್ಕ ಕಾರ್ಯಕ್ರಮ ನಿರೂಪಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading