“ಎಮಿನೆಂಟ್ ಇಂಜಿನಿಯರ್-2026” ಪ್ರಶಸ್ತಿಗೆ ಭಾಜನರಾದ ಪ್ರಸನ್ನ ದರ್ಬೆ

ಕನ್ನಡಪ್ರಭ ಹಾಗೂ ಏಷಿಯಾನೆಟ್ ಸುವರ್ಣನ್ಯೂಸ್ ವತಿಯಿಂದ ನೀಡಲಾಗುವ 2026ನೇ ಸಾಲಿನ “ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿ”ಗೆ ಪುತ್ತೂರು ತಾಲೂಕಿನ ಹಿರೇಬಂಡಾಡಿ ಗ್ರಾಮದ ಪ್ರಸನ್ನ ದರ್ಬೆ ಭಾಜನರಾಗಿದ್ದಾರೆ. ಸೆ.26 ಶನಿವಾರದಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಪ್ರಸನ್ನ ದರ್ಬೆ ರವರು ಈ ಪ್ರಶಸ್ತಿಯನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ವಿಧಾನಪರಿಷತ್ ಸಭಾಪತಿಗಳಾದ ಸಲೀಂ ಅಹ್ಮದ್, ಲೋಕಸಭಾ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಚಲನಚಿತ್ರ ನಟಿ ಬೃಂದಾ ಆಚಾರ್ಯ, ಪರ್ವ ಗ್ರೂಪ್ ದುಬೈ ಸಂಸ್ಥಾಪಕರಾದ ನೀಲೇಶ್.ಹೆಚ್.ಪಿ ಹಾಗೂ ಕನ್ನಡಪ್ರಭ-ಏಷಿಯಾನೆಟ್ ಸುವರ್ಣನ್ಯೂಸ್ ಸಮೂಹ ಸಂಪಾದಕೀಯ ನಿರ್ದೇಶಕರಾದ ರವಿ ಹೆಗಡೆ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.
ಪ್ರಸನ್ನ ದರ್ಬೆ ರವರು ತಮ್ಮ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಉಪ್ಪಿನಂಗಡಿಯಲ್ಲಿ, ಪಿಯುಸಿ ಹಾಗೂ ಡಿಪ್ಲೋಮಾ ಶಿಕ್ಷಣವನ್ನು ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಹಾಗೂ ಸುಳ್ಯದ ಕೆವಿಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ಪದವಿಯನ್ನು ಪಡೆದಿದ್ದು, 2013ರಿಂದ ಕರ್ನಾಟಕ ಸರ್ಕಾರದ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದಲ್ಲಿ ಸೇವೆ ಸಲ್ಲಿಸಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕುಕ್ಕೆ ಸುಬ್ರಹ್ಮಣ್ಯ, ಹೊಸ್ಮಠ ಸೇರಿದಂತೆ ಹಲವಾರು ಸೇತುವೆಗಳ ವಿನ್ಯಾಸ ಕಾರ್ಯದಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದರು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎಕ್ಸಿಟ್ ರಸ್ತೆ ವಿನ್ಯಾಸ ಕಾರ್ಯದಲ್ಲೂ ಕಾರ್ಯ ನಿರ್ವಹಿಸಿದ್ದ ಇವರು 2018ರಲ್ಲಿ ಶ್ರವಣಬೆಳಗೊಳದ ಮಹಾಮಸ್ತಕಾಭಿಷೇಕದ ತಾತ್ಕಾಲಿಕ ನಗರ ನಿರ್ಮಾಣದ ಮುಖ್ಯ ಇಂಜಿನಿಯರ್ ಆಗಿ ನೇಮಕಗೊಂಡು ಸರ್ಕಾರ ಹಾಗೂ ಜೈನ ಮಠದಿಂದ ಮೆಚ್ಚುಗೆಯನ್ನು ಗಳಿಸಿದ್ದರು. 2019ರಲ್ಲಿ ಸರ್ಕಾರಿ ಸೇವೆಗೆ ರಾಜೀನಾಮೆ ನೀಡಿದ ಇವರು ತಮ್ಮದೇ ಆದ ಸ್ವಂತ ಸಂಸ್ಥೆಯನ್ನು ಸ್ಥಾಪಿಸಿ ಪ್ರಸ್ತುತ ಕರ್ನಾಟಕ ಸರ್ಕಾರದ ಎಂಪನ್ನೆಲ್ಡ್ ಸ್ಟ್ರಕ್ಚರಲ್ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅದೇ ರೀತಿ ಸಾಮಾಜಿಕ ಕ್ಷೇತ್ರದಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಂಡು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಇವರು ಪ್ರಸ್ತುತ ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading