ಅ.9ರಂದು ಕಾಪು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ

ಕಾಪು: ಉದ್ಯೋಗಕ್ಕಾಗಿ ಹುಡುಕಾಟದಲ್ಲಿರುವ ಯುವಜನರಿಗೆ ನೇರವಾಗಿ ಕಂಪನಿಗಳ ಪ್ರತಿನಿಧಿಗಳನ್ನು ಭೇಟಿಯಾಗಿ ಸಂದರ್ಶನ ಎದುರಿಸುವ ಅವಕಾಶದೊಂದಿಗೆ, ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಅಗತ್ಯ ಮಾಹಿತಿಯನ್ನೂ ಒಂದೇ ವೇದಿಕೆಯಲ್ಲಿ ಒದಗಿಸುವ 5ನೇ ಬೃಹತ್ ಉದ್ಯೋಗ ಮೇಳ ಮತ್ತು ಸ್ಟಡಿ ಅಬ್ರಾಡ್ ಎಕ್ಸ್‌ಪೋ–2026 ಅಕ್ಟೋಬರ್ 9ರಂದು ಕುಂತಳನಗರದ ಆಶಾ ಪ್ರಕಾಶ್ ಶೆಟ್ಟಿ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿದೆ.

. . . . . . . . .

ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್‌ನ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ವತಿಯಿಂದ ನಿಟ್ಟೆಯ ಎನ್‌ಎಂಎಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಹಯೋಗದಲ್ಲಿ ಹಾಗೂ ಎಂ.ಆರ್.ಜಿ. ಗ್ರೂಪ್ ಪ್ರಾಯೋಜಕತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಕಾಪು ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

. . . . . . .

ಬೆಳಿಗ್ಗೆ 9ರಿಂದ ಅಭ್ಯರ್ಥಿಗಳ ನೋಂದಣಿ ಮತ್ತು ಸಂದರ್ಶನ ಪ್ರಕ್ರಿಯೆ ಆರಂಭವಾಗಲಿದ್ದು, ಸಂಜೆ 5ರವರೆಗೆ ಮೇಳ ನಡೆಯಲಿದೆ. ಉತ್ಪಾದನೆ, ಐಟಿ, ಸೇವಾ ವಲಯ, ನಿರ್ವಹಣೆ, ಲೆಕ್ಕಪತ್ರ ಮತ್ತು ಹಣಕಾಸು, ಸೌಲಭ್ಯ ನಿರ್ವಹಣೆ, ನವೀಕರಿಸಬಹುದಾದ ಇಂಧನ, ವಾಹನೋದ್ಯಮ ಹಾಗೂ ಚಿಲ್ಲರೆ ವ್ಯಾಪಾರ ಸೇರಿದಂತೆ ವಿವಿಧ ಕ್ಷೇತ್ರಗಳ ಸುಮಾರು 50 ಕಂಪನಿಗಳು ಭಾಗವಹಿಸುವ ನಿರೀಕ್ಷೆಯಿದೆ. ಸುಮಾರು 2,500 ಉದ್ಯೋಗಾವಕಾಶಗಳು ಲಭ್ಯವಾಗುವ ಸಾಧ್ಯತೆಯಿದ್ದು, 3,000ಕ್ಕೂ ಅಧಿಕ ಅಭ್ಯರ್ಥಿಗಳು ಮೇಳದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಎಂಜಿನಿಯರಿಂಗ್‌ನ ಎಲ್ಲ ವಿಭಾಗಗಳು, ಡಿಪ್ಲೊಮಾ, ಐಟಿಐ, ಪದವಿ, ಎಂಬಿಎ, ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಮೇಳದಲ್ಲಿ ಭಾಗವಹಿಸಬಹುದು. ಅಂತಿಮ ವರ್ಷದ ವಿದ್ಯಾರ್ಥಿಗಳಿಗೂ ಅವಕಾಶವಿದೆ. ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲೆಗಳು ಹಾಗೂ ಬಯೋಡೇಟಾದ ಸುಮಾರು 10 ಪ್ರತಿಗಳನ್ನು ತರಬೇಕು. ಇದರಿಂದ ಒಂದೇ ಸ್ಥಳದಲ್ಲಿ ಹಲವು ಕಂಪನಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅನುಕೂಲವಾಗಲಿದೆ ಎಂದು ಅಶೋಕ್ ಕುಮಾರ್ ಶೆಟ್ಟಿ ಹೇಳಿದರು.

ನಾಲ್ಕು ಮೇಳಗಳಿಂದ 3,500 ಅಭ್ಯರ್ಥಿಗಳಿಗೆ ನೆರವು

ಟ್ರಸ್ಟ್ ಈವರೆಗೆ ನಾಲ್ಕು ಬೃಹತ್ ಉದ್ಯೋಗ ಮೇಳಗಳನ್ನು ಆಯೋಜಿಸಿದ್ದು, ಅವುಗಳ ಮೂಲಕ ಸುಮಾರು 3,500 ಅಭ್ಯರ್ಥಿಗಳ ಆಯ್ಕೆ ಅಥವಾ ಮುಂದಿನ ಹಂತದ ನೇಮಕಾತಿಗೆ ಶಿಫಾರಸು ಮಾಡಲು ನೆರವಾಗಿದೆ. ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಮೂಲಕ ಎಂಜಿನಿಯರಿಂಗ್, ಡಿಪ್ಲೊಮಾ, ಐಟಿಐ ಹಾಗೂ ಪದವಿ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 1,800 ಮಂದಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗಿದೆ. ಸುಮಾರು 440 ಮಂದಿಗೆ ಒಂದು ತಿಂಗಳ ಡಿಜಿಟಲ್ ಸಾಕ್ಷರತೆ ಮತ್ತು ಕಂಪ್ಯೂಟರ್ ತರಬೇತಿ ನೀಡಲಾಗಿದೆ. ಮಹಿಳಾ ಸಬಲೀಕರಣ ಕಾರ್ಯಕ್ರಮಗಳನ್ನೂ ನಿರಂತರವಾಗಿ ನಡೆಸಲಾಗುತ್ತಿದೆ.

ವಿದೇಶಿ ಶಿಕ್ಷಣದ ಕನಸಿಗೂ ಒಂದೇ ವೇದಿಕೆ

ಸ್ಟಡಿ ಅಬ್ರಾಡ್ ಎಕ್ಸ್‌ಪೋದಲ್ಲಿ ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯಗಳು ಹಾಗೂ ಶಿಕ್ಷಣ ಸಲಹೆಗಾರರ ಪ್ರತಿನಿಧಿಗಳಿಂದ ಕೋರ್ಸ್‌ಗಳು, ಪ್ರವೇಶ ಪ್ರಕ್ರಿಯೆ, ಭಾಷಾ ಅರ್ಹತಾ ಪರೀಕ್ಷೆಗಳು, ಶಿಕ್ಷಣ ಸಾಲ ಮತ್ತು ವೀಸಾ ಪ್ರಕ್ರಿಯೆ ಕುರಿತು ನೇರ ಮಾಹಿತಿ ಪಡೆಯಲು ಅವಕಾಶವಿದೆ.

ಎನ್‌ಎಂಎಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ತರಬೇತಿ ಮತ್ತು ಉದ್ಯೋಗ ನಿಯೋಜನೆ ವಿಭಾಗದ ಭರತ್ ಕುಮಾರ್ ಮಾತನಾಡಿ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಮೇಳದಲ್ಲಿ ಭಾಗವಹಿಸಿ ಕಂಪನಿಗಳ ಪ್ರತಿನಿಧಿಗಳೊಂದಿಗೆ ನೇರವಾಗಿ ಸಂದರ್ಶನ ನಡೆಸುವ ಅವಕಾಶವನ್ನು ಬಳಸಿಕೊಳ್ಳಬೇಕು ಎಂದರು.

ನಿಟ್ಟೆ ವಿಶ್ವವಿದ್ಯಾಲಯ, ಮಾಹೆ ಹಾಗೂ ಬಂಟಕಲ್ ಎಂಜಿನಿಯರಿಂಗ್ ಕಾಲೇಜು ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳ ಸಹಕಾರದಿಂದ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ತನ್ನ ಚಟುವಟಿಕೆಗಳನ್ನು ವಿಸ್ತರಿಸಲು ಸಾಧ್ಯವಾಗಿದೆ. ಉದ್ಯಮಶೀಲತೆಯ ಮೂಲಕ ಗ್ರಾಮೀಣಾಭಿವೃದ್ಧಿ ಎಂಬ ಧ್ಯೇಯದೊಂದಿಗೆ ಕೇಂದ್ರ ಕಾರ್ಯನಿರ್ವಹಿಸುತ್ತಿದೆ ಎಂದು ಅಶೋಕ್ ಕುಮಾರ್ ಶೆಟ್ಟಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟ್ ಖಜಾಂಚಿ ವಿಜಿತ್ ಶೆಟ್ಟಿ ಸ್ವಾಗತಿಸಿದರು. ಟ್ರಸ್ಟಿ ಪದ್ಮನಾಭ ಹೆಗ್ಡೆ ವಂದಿಸಿದರು. ಸತೀಶ್ ಶೆಟ್ಟಿ ಮತ್ತು ದಯಾನಂದ ಶೆಟ್ಟಿ ಕಲ್ಮಂಜೆ ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading