ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸುಳ್ಯ ವಲಯ ಎಸ್.ಕೆ.ಎಸ್.ಎಸ್.ಎಫ್ ವತಿಯಿಂದ ನ.13 ರಂದು ಪ್ರತಿಭಟನೆ

ಸುಳ್ಯ : ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ(SIR) ಪ್ರಕ್ರಿಯೆಯಲ್ಲಿನ ಅಕ್ರಮಗಳ ಆರೋಪ ಹಾಗೂ ಚುನಾವಣಾ ವ್ಯವಸ್ಥೆಯ ಪಾರದರ್ಶಕತೆ ಕುರಿತು ವ್ಯಕ್ತವಾಗಿರುವ ಆತಂಕಗಳ ಹಿನ್ನೆಲೆಯಲ್ಲಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಎಸ್‌ಕೆಎಸ್‌ಎಸ್‌ಎಫ್ ಸುಳ್ಯ ವಲಯದ ವತಿಯಿಂದ ನವೆಂಬರ್ 13 ರಂದು ಶುಕ್ರವಾರ ಸಂಜೆ 4:00 ಗಂಟೆಗೆ ಸುಳ್ಯದ ಖಾಸಗಿ ಬಸ್ ನಿಲ್ದಾಣದಲ್ಲಿ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ‘ಮತದಾನದ ಹಕ್ಕು ನಮ್ಮದು, ಪ್ರಜಾಪ್ರಭುತ್ವದ ರಕ್ಷಣೆ ನಮ್ಮೆಲ್ಲರ ಹೊಣೆ’ ಎಂಬ ಘೋಷಣೆಯೊಂದಿಗೆ ಪ್ರತಿಭಟನೆ ಆಯೋಜಿಸಲಾಗಿದ್ದು, ಮತದಾರರ ಹಕ್ಕುಗಳ ರಕ್ಷಣೆ, ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ಸಂವಿಧಾನಾತ್ಮಕ ಸಂಸ್ಥೆಗಳ ಸ್ವಾಯತ್ತತೆಯನ್ನು ಕಾಪಾಡುವಂತೆ ಒತ್ತಾಯಿಸಲಾಗುವುದು ಎಂದು ಸಂಘಟನೆಯ ಪ್ರಕಟಣೆ ತಿಳಿಸಿದೆ.

. . . . . . . . .

ಪ್ರಜಾಪ್ರಭುತ್ವದ ಮೂಲಾಧಾರವೇ ಜನರ ಮತದಾನದ ಹಕ್ಕು. ಪ್ರತಿಯೊಬ್ಬ ನಾಗರಿಕನ ಮತಕ್ಕೂ ಸಮಾನ ಮೌಲ್ಯವಿದ್ದು, ಆ ಹಕ್ಕಿನ ರಕ್ಷಣೆ ಹಾಗೂ ಚುನಾವಣಾ ವ್ಯವಸ್ಥೆಯ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಉಳಿಸಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಚುನಾವಣಾ ಪ್ರಕ್ರಿಯೆ ನಿಷ್ಪಕ್ಷಪಾತವಾಗಿ ಹಾಗೂ ಪಾರದರ್ಶಕವಾಗಿ ನಡೆಯುವುದನ್ನು ಖಚಿತಪಡಿಸಿಕೊಳ್ಳಬೇಕೆಂದು ಸಂಘಟನೆ ಆಗ್ರಹಿಸಿದೆ.ದೇಶದಲ್ಲಿ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಸಾರ್ವಜನಿಕ ವಲಯದಲ್ಲಿ ಹಲವು ಪ್ರಶ್ನೆಗಳು ಹಾಗೂ ಆತಂಕಗಳು ವ್ಯಕ್ತವಾಗುತ್ತಿವೆ. ಮತದಾರರ ಹಕ್ಕುಗಳಿಗೆ ಯಾವುದೇ ರೀತಿಯ ಧಕ್ಕೆಯಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರ ಸಂದೇಹಗಳಿಗೆ ಸ್ಪಷ್ಟನೆ ನೀಡುವ ಮೂಲಕ ಚುನಾವಣಾ ವ್ಯವಸ್ಥೆಯ ಮೇಲಿನ ವಿಶ್ವಾಸವನ್ನು ಬಲಪಡಿಸಬೇಕೆಂದು ಒತ್ತಾಯಿಸಲಾಗಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿಯ ಕುರಿತು ವ್ಯಕ್ತವಾಗಿರುವ ಆಕ್ಷೇಪಣೆಗಳಿಗೆ ಸಮರ್ಪಕ ಉತ್ತರ ನೀಡಬೇಕು. ಈ ಹಿನ್ನೆಲೆಯಲ್ಲಿ ಅವರ ರಾಜೀನಾಮೆಗೆ ಆಗ್ರಹಿಸಿ ಶಾಂತಿಯುತ ಹಾಗೂ ಪ್ರಜಾಸತ್ತಾತ್ಮಕ ರೀತಿಯಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

. . . . . . .

ಅಧಿಕಾರಕ್ಕಿಂತ ಸಂವಿಧಾನ ಶ್ರೇಷ್ಠವಾಗಿದ್ದು, ಜನರ ಹಕ್ಕುಗಳ ರಕ್ಷಣೆ ಎಲ್ಲಕ್ಕಿಂತ ಮುಖ್ಯವಾಗಿದೆ. ಅನ್ಯಾಯದ ವಿರುದ್ಧ ಧ್ವನಿ ಎತ್ತುವುದು ಹಾಗೂ ನ್ಯಾಯಕ್ಕಾಗಿ ಶಾಂತಿಯುತವಾಗಿ ಹೋರಾಡುವುದು ಪ್ರಜಾಪ್ರಭುತ್ವದ ಪ್ರಮುಖ ಮೌಲ್ಯವಾಗಿದೆ. ಸಮಸ್ತದ ತ್ಯಾಗಪೂರ್ಣ ಹೋರಾಟದ ಪರಂಪರೆಯಿಂದ ಸ್ಫೂರ್ತಿ ಪಡೆದ ಎಸ್‌ಕೆಎಸ್‌ಎಸ್‌ಎಫ್ ಕಾರ್ಯಕರ್ತರು ನ್ಯಾಯ, ಸಮಾನತೆ, ಮಾನವೀಯತೆ ಹಾಗೂ ಸಂವಿಧಾನಾತ್ಮಕ ಮೌಲ್ಯಗಳ ರಕ್ಷಣೆಗೆ ಬದ್ಧರಾಗಿದ್ದಾರೆ ಎಂದು ಸಂಘಟನೆ ತಿಳಿಸಿದೆ.ಈ ಪ್ರತಿಭಟನೆಯು ಕೇವಲ ರಾಜೀನಾಮೆಗೆ ಆಗ್ರಹಿಸುವ ಕಾರ್ಯಕ್ರಮವಾಗಿರದೆ, ಜನರ ಮತದಾನದ ಹಕ್ಕುಗಳ ರಕ್ಷಣೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಉಳಿವಿಗಾಗಿ ನಡೆಯುವ ಜವಾಬ್ದಾರಿಯುತ ನಾಗರಿಕ ಹೋರಾಟವಾಗಿದೆ ಎಂದು ಸಂಘಟನೆ ಅಭಿಪ್ರಾಯಪಟ್ಟಿದೆ. ನ್ಯಾಯ, ಸಮಾನತೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳಲ್ಲಿ ನಂಬಿಕೆಯಿರುವ ವಿವಿಧ ಸಂಘಟನೆಗಳ ನಾಯಕರು, ಕಾರ್ಯಕರ್ತರು, ಸಮಸ್ತದ ಅಭಿಮಾನಿಗಳು ಹಾಗೂ ಸಾರ್ವಜನಿಕರು ಪ್ರತಿಭಟನಾ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಎಸ್‌ಕೆಎಸ್‌ಎಸ್‌ಎಫ್ ಸುಳ್ಯ ವಲಯ ಪ್ರಕಟಣೆಯ ಮೂಲಕ ಮನವಿ ಮಾಡಿದೆ


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading