ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬಸ್ ನಿಲುಗಡೆಗೆ ವಿದ್ಯಾರ್ಥಿಗಳ ಆಗ್ರಹ ; ಮೂರು ದಿನಗಳ ಗಡುವು

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಂಚರಿಸುವ ಬಸ್‌ಗಳು ಕಾಲೇಜಿನ ಮುಂಭಾಗದಲ್ಲಿರುವ ಬಸ್ ನಿಲ್ದಾಣ ಹಾಗೂ ಪೊಲೀಸ್ ಠಾಣೆಯ ಮುಂಭಾಗದಲ್ಲಿ ನಿಲುಗಡೆ ಮಾಡದಿರುವುದರಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಪ್ರತಿದಿನ ಸಾರ್ವಜನಿಕ ಸಾರಿಗೆಯನ್ನು ಅವಲಂಬಿಸಿ ಕಾಲೇಜಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಇದರಿಂದ ಅನಾನುಕೂಲವಾಗುತ್ತಿದ್ದು, ನಿಗದಿತ ಸ್ಥಳಗಳಲ್ಲಿ ಬಸ್ ನಿಲುಗಡೆ ಮಾಡುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

. . . . . . . . .

ಈ ಕುರಿತು ಹಲವು ಬಾರಿ ಬಸ್ ಚಾಲಕರಲ್ಲಿ ಮನವಿ ಮಾಡಿಕೊಂಡರೂ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲ. ವಿದ್ಯಾರ್ಥಿಗಳ ಮನವಿಯನ್ನು ನಿರ್ಲಕ್ಷಿಸುವ ಹಾಗೂ ಅವರ ಸಮಸ್ಯೆಗಳಿಗೆ ಸ್ಪಂದಿಸದ ಕೆಲವು ಬಸ್ ಚಾಲಕರ ವರ್ತನೆಗೆ ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಅನುಕೂಲತೆ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಾಲೇಜಿನ ಮುಂಭಾಗ ಹಾಗೂ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಬಸ್ ನಿಲುಗಡೆಗೆ ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ.

. . . . . . .

ಈ ಕುರಿತು ಎಬಿವಿಪಿ ಬೆಂಬಲಿತ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ 2025-26ನೇ ಸಾಲಿನ ಅಧ್ಯಕ್ಷ ಮುಳಿಯ ಸಾತ್ವಿಕ್, “ವಿದ್ಯಾರ್ಥಿಗಳ ಅನುಕೂಲತೆ ಹಾಗೂ ಹಿತಾಸಕ್ತಿಗೆ ಅನುಗುಣವಾಗಿ ಬಸ್‌ಗಳು ನಿಗದಿತ ಸ್ಥಳಗಳಲ್ಲಿ ನಿಲುಗಡೆ ಮಾಡುವಂತೆ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಮೂರು ದಿನಗಳ ಕಾಲಾವಕಾಶ ನೀಡಲಾಗಿದೆ. ಈ ಗಡುವಿನೊಳಗೆ ಸಮಸ್ಯೆಗೆ ಪರಿಹಾರ ಕಲ್ಪಿಸದಿದ್ದಲ್ಲಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅನಿವಾರ್ಯವಾಗಿ ಬಸ್ ತಡೆದು ಪ್ರತಿಭಟನೆ ನಡೆಸುವುದರ ಜೊತೆಗೆ ಸಂಬಂಧಪಟ್ಟ ಕಚೇರಿಗೆ ಮುತ್ತಿಗೆ ಹಾಕಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸಂಬಂಧ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದ ಟ್ರಾಫಿಕ್ ಕಂಟ್ರೋಲರ್ (TC) ಅವರಿಗೆ ವಿದ್ಯಾರ್ಥಿಗಳ ಪರವಾಗಿ ಮನವಿ ಸಲ್ಲಿಸಲಾಗಿದ್ದು, ನಿಗದಿತ ಮೂರು ದಿನಗಳೊಳಗೆ ಸೂಕ್ತ ಕ್ರಮ ಕೈಗೊಂಡು ವಿದ್ಯಾರ್ಥಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಆಗ್ರಹಿಸಲಾಗಿದೆ. ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗೆ ಸಾರಿಗೆ ಇಲಾಖೆ ಸ್ಪಂದಿಸುವುದೇ ಎಂಬುದನ್ನು ಕಾದು ನೋಡಬೇಕಿದೆ.ಈ ಸಂಧರ್ಭದಲ್ಲಿ ವಿದ್ಯಾರ್ಥಿ ನಾಯಕರದ ಅಕ್ಷರ, ಆಶ್ಲೇಷ್ ಕೆ.ಡಿ, ಶ್ರೀಶರಣ್ ಮೊಗ್ರ, ಅಮಿತ್, ಚಿರಾಜ್, ಯಶಸ್ ಮತ್ತಿತರರು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading