ನ.14ರಂದು ಮಂಡೆಕೋಲಿನಲ್ಲಿ ಜಿಲ್ಲಾ ಮಟ್ಟದ 73ನೇ ಸಹಕಾರ ಸಪ್ತಾಹ ಉದ್ಘಾಟನೆ

ಸುಳ್ಯ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಜಿಲ್ಲಾ ಸಹಕಾರಿ ಯೂನಿಯನ್, ಸುಳ್ಯ ತಾಲೂಕು ಸಹಕಾರಿ ಯೂನಿಯನ್ ಹಾಗೂ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸಹಕಾರದೊಂದಿಗೆ, ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಜಿಲ್ಲಾ ಮಟ್ಟದ 73ನೇ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭ ನವೆಂಬರ್ 14ರ ಶನಿವಾರದಂದು ಮಂಡೆಕೋಲಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಲಿದೆ. ‘ಸಹಕಾರ ಸಂಸ್ಥೆಗಳ ಬೆಳವಣಿಗೆಯಲ್ಲಿ ಉತ್ತಮ ಪರಿಸರ, ತಂತ್ರಜ್ಞಾನ, ಕೌಶಲ್ಯಾಧಾರಿತ, ವೃತ್ತಿಪರ ಸೇವೆ’ ಎಂಬ ಧ್ಯೇಯದೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

. . . . . . . . .

ಬೆಳಿಗ್ಗೆ 9:00 ಗಂಟೆಗೆ ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರಧಾನ ಕಚೇರಿ ಬಳಿ ಮಾಜಿ ಅಧ್ಯಕ್ಷ ಪಾಂಡುರಂಗ ರಾವ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಸಪ್ತಾಹದ ಜಾಥಾವನ್ನು ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಎನ್. ಮನ್ಮಥ ಉದ್ಘಾಟಿಸಲಿದ್ದು, ಸಂಘದ ಅಧ್ಯಕ್ಷ ಸುರೇಶ್ ಕಣೆಮರಡ್ಕ ಸಹಕಾರ ಧ್ವಜಾರೋಹಣ ನೆರವೇರಿಸಲಿದ್ದಾರೆ.

. . . . . . .

ಗಣ್ಯರ ಉಪಸ್ಥಿತಿ – ಉದ್ಘಾಟನೆ : ಪೂರ್ವಾಹ್ನ 9:30ಕ್ಕೆ ನಡೆಯಲಿರುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ. ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ವಹಿಸಲಿದ್ದಾರೆ. ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ವಸ್ತು ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಅವರು ಸಾಧಕರಿಗೆ ಸನ್ಮಾನ ನೆರವೇರಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ 2027ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆಗೊಳಿಸಲಿದ್ದು, ಕರ್ನಾಟಕ ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಕ್ರೀಡೋತ್ಸವದ ಬಹುಮಾನ ವಿತರಿಸಲಿದ್ದಾರೆ. ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಸಂತೋಷ್ ಕಟ್ಟ ‘ಸುಸ್ಥಿರ ಅಭಿವೃದ್ಧಿ ಮತ್ತು ಬೆಳವಣಿಗೆಯಲ್ಲಿ ಸಹಕಾರ ಸಂಸ್ಥೆಗಳ ಪಾತ್ರ’ ಕುರಿತು ವಿಚಾರ ಮಂಡಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ವಿಷ್ಣು ಭಟ್ ಮೂಲೆತೋಟ, ದ.ಕ. ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಭರತ್ ನೆಕ್ರಾಜೆ, ಸಹಕಾರ ಸಂಘಗಳ ಉಪನಿಬಂಧಕ ರಮೇಶ್ ಎಚ್.ಎನ್., ಸಹಾಯಕ ನಿಬಂಧಕ ಎಸ್.ಎಂ. ರಘು ಹಾಗೂ ಸಹಕಾರ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಪಾಲ್ಗೊಳ್ಳಲಿದ್ದಾರೆ.

ಸಾಧಕರಿಗೆ ಗೌರವಾರ್ಪಣೆ : ಸಹಕಾರ ಕ್ಷೇತ್ರದಲ್ಲಿ ಅನನ್ಯ ಸಾಧನೆಗೈದ ಎ.ವಿ. ತೀರ್ಥರಾಮ(ನಿರ್ದೇಶಕರು, ಕ್ಯಾಂಪ್ಕೋ), ಪ್ರಭಾಕರ ನಾಯಕ್(ಮಾಜಿ ಅಧ್ಯಕ್ಷರು, ಭೂ ಅಭಿವೃದ್ಧಿ ಬ್ಯಾಂಕ್), ವಿಶ್ವನಾಥ ನಾಯರ್(ನಿವೃತ್ತ ಸಿಇಒ, ಎಸ್‌ಸಿಡಿಸಿಸಿ ಬ್ಯಾಂಕ್) ಹಾಗೂ ಬಾಲಸುಬ್ರಹ್ಮಣ್ಯ ಭಟ್ (ನಿವೃತ್ತ ಹಿರಿಯ ಉಪನಿರ್ದೇಶಕರು, ಲೆಕ್ಕಪರಿಶೋಧನಾ ಇಲಾಖೆ) ಸೇರಿದಂತೆ ಸಂಘದ ಮಾಜಿ ಅಧ್ಯಕ್ಷರು ಮತ್ತು ತಾಲೂಕಿನ ನಿವೃತ್ತ ಸಹಕಾರಿ ಸಿಬ್ಬಂದಿಗಳಿಗೆ ಗೌರವಾರ್ಪಣೆ ನಡೆಯಲಿದೆ.

ಕೃಷಿ ಮಾಹಿತಿ ಕಾರ್ಯಾಗಾರ – ತುಳು ನಾಟಕ :ಅಪರಾಹ್ನ 2:30ರಿಂದ 3:30ರವರೆಗೆ ಪ್ರಗತಿಪರ ಕೃಷಿ ತಜ್ಞ ಸುರೇಶ್ ಬಲ್ನಾಡ್ ಅವರಿಂದ ‘ಕಾಳುಮೆಣಸು, ಕಾಫಿ ಹಾಗೂ ಉಪ ಬೆಳೆಗಳ ನಾಟಿ ಮತ್ತು ಪೋಷಣೆ’ ಕುರಿತು ಮಾಹಿತಿ ಕಾರ್ಯಾಗಾರ ನಡೆಯಲಿದೆ. 3:30ರಿಂದ ನವೋದಯ ಸ್ವಸಹಾಯ ತಂಡದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಂಜೆ 6:30ಕ್ಕೆ ಶಾರದಾ ಆರ್ಟ್ಸ್ ಕಲಾವಿದೆರ್ ಮಂಜೇಶ್ವರ ಇವರಿಂದ ತುಳು ಸಾಮಾಜಿಕ ಹಾಸ್ಯ ನಾಟಕ ‘ಎನ್ನ Family’ ಪ್ರದರ್ಶನಗೊಳ್ಳಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading