ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಾಲೇಜು ಹಾಗೂ ಪೊಲೀಸ್ ಠಾಣೆ ಮುಂಭಾಗ ಬಸ್ ನಿಲುಗಡೆಗೆ ತೀರ್ಮಾನ – ವಿದ್ಯಾರ್ಥಿಗಳ ಹೋರಾಟಕ್ಕೆ ಜಯ

ಕುಕ್ಕೆ ಸುಬ್ರಹ್ಮಣ್ಯ: ಕಾಲೇಜಿನ ಮುಂಭಾಗದಲ್ಲಿರುವ ಬಸ್ ನಿಲ್ದಾಣ ಹಾಗೂ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಬಸ್‌ಗಳನ್ನು ನಿಲುಗಡೆ ಮಾಡಬೇಕೆಂದು ವಿದ್ಯಾರ್ಥಿಗಳು ಸಲ್ಲಿಸಿದ್ದ ಮನವಿಗೆ ಕೊನೆಗೂ ಸ್ಪಂದನೆ ದೊರೆತಿದ್ದು, ಬಹುದಿನಗಳಿಂದ ಎದುರಾಗಿದ್ದ ಬಸ್ ನಿಲುಗಡೆ ಸಮಸ್ಯೆಗೆ ಪರಿಹಾರ ಲಭಿಸಿದೆ.

. . . . . . . . .

ಬಸ್‌ಗಳು ನಿಗದಿತ ಸ್ಥಳಗಳಲ್ಲಿ ನಿಲುಗಡೆ ಮಾಡದ ಕಾರಣ ಕಾಲೇಜಿಗೆ ಪ್ರತಿದಿನ ಆಗಮಿಸುವ ಹಾಗೂ ತೆರಳುವ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದರು. ಈ ಸಮಸ್ಯೆಯನ್ನು ಪರಿಹರಿಸುವಂತೆ ವಿದ್ಯಾರ್ಥಿಗಳು ಒಗ್ಗಟ್ಟಿನಿಂದ ಧ್ವನಿ ಎತ್ತಿ, ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದ ಟ್ರಾಫಿಕ್ ಕಂಟ್ರೋಲರ್ (TC) ಅವರಿಗೆ ಮನವಿ ಸಲ್ಲಿಸಿದ್ದರು. ಕಾಲೇಜಿನ ಮುಂಭಾಗದ ಬಸ್ ನಿಲ್ದಾಣ ಹಾಗೂ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಬಸ್‌ಗಳನ್ನು ಕಡ್ಡಾಯವಾಗಿ ನಿಲುಗಡೆ ಮಾಡುವಂತೆ ಒತ್ತಾಯಿಸಿ, ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಮೂರು ದಿನಗಳ ಗಡುವನ್ನೂ ನೀಡಿದ್ದರು.

. . . . . . .

ವಿದ್ಯಾರ್ಥಿಗಳ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸುಳ್ಯ ಬಸ್ ಡಿಪೋ ಹಾಗೂ ಸಂಬಂಧಪಟ್ಟ ಸಾರಿಗೆ ಅಧಿಕಾರಿಗಳು ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಂಡಿದ್ದಾರೆ. ಇದರಿಂದ ವಿದ್ಯಾರ್ಥಿಗಳ ದೈನಂದಿನ ಪ್ರಯಾಣಕ್ಕೆ ಅನುಕೂಲವಾಗಲಿದ್ದು, ವಿದ್ಯಾರ್ಥಿ ಸಮುದಾಯದಲ್ಲಿ ಸಂತಸ ಮೂಡಿದೆ.

ಈ ಕುರಿತು ಪ್ರತಿಕ್ರಿಯಿಸಿದ ಎಬಿವಿಪಿ ಬೆಂಬಲಿತ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ 2025–26ನೇ ಸಾಲಿನ ಅಧ್ಯಕ್ಷ ಮುಳಿಯ ಸಾತ್ವಿಕ್, “ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗೆ ಸ್ಪಂದಿಸಿ ಸಮಸ್ಯೆಗೆ ಪರಿಹಾರ ಕಲ್ಪಿಸಿದ ಸುಳ್ಯ ಬಸ್ ಡಿಪೋ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಹೃತ್ಪೂರ್ವಕ ಧನ್ಯವಾದಗಳು. ಈ ವಿಚಾರವನ್ನು ನಿರಂತರವಾಗಿ ಬೆನ್ನತ್ತಿ ವಿದ್ಯಾರ್ಥಿಗಳ ಸಮಸ್ಯೆ ಪರಿಹಾರವಾಗುವಂತೆ ಶ್ರಮಿಸಿದ ವಿದ್ಯಾರ್ಥಿ ನಾಯಕರಾದ ಚಿರಾಜ್ ವಳಲಂಬೆ, ಯಶಸ್, ಆಶ್ಲೇಶ್ ಕೆ.ಡಿ., ಶ್ರೀಶರಣ್ ಮೊಗ್ರ, ಅಕ್ಷರ ಹಾಗೂ ಅಮಿತ್ ನಾಯಕ್ ಅವರಿಗೆ ವಿಶೇಷ ಕೃತಜ್ಞತೆಗಳು. ಎಲ್ಲರ ಸಂಘಟಿತ ಪ್ರಯತ್ನ ಮತ್ತು ಸಹಕಾರದಿಂದ ಈ ಯಶಸ್ಸು ಸಾಧ್ಯವಾಗಿದೆ. ಇದು ವಿದ್ಯಾರ್ಥಿಗಳ ಒಗ್ಗಟ್ಟು ಹಾಗೂ ಸಂಘಟಿತ ಪ್ರಯತ್ನಕ್ಕೆ ಸಂದ ಜಯವಾಗಿದೆ” ಎಂದು ತಿಳಿಸಿದರು.

ವಿದ್ಯಾರ್ಥಿಗಳ ಸಂಘಟಿತ ಹೋರಾಟದಿಂದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿದ್ದ ಸಮಸ್ಯೆಗೆ ಪರಿಹಾರ ದೊರೆತಿರುವುದು ಗಮನಾರ್ಹವಾಗಿದ್ದು, ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗೆ ಸ್ಪಂದಿಸಿದ ಸಾರಿಗೆ ಇಲಾಖೆಯ ಕ್ರಮಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading